ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

J&K: ಲೋಕಸಭಾ ಚುನಾವಣೆಯಲ್ಲಿ NC ಸ್ವತಂತ್ರ ಸ್ಪರ್ಧೆ- ಫಾರೂಕ್ ಅಬ್ದುಲ್ಲಾ

Published 15 ಫೆಬ್ರುವರಿ 2024, 13:05 IST
Last Updated 15 ಫೆಬ್ರುವರಿ 2024, 13:05 IST
ಅಕ್ಷರ ಗಾತ್ರ

ಶ್ರೀನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮಿರದ ಅತಿದೊಡ್ಡ ಪ್ರಾದೇಶಿಕ ಪಕ್ಷವಾದ ‘ನ್ಯಾಷನಲ್‌ ಕಾನ್ಫರೆನ್ಸ್’ ಪಕ್ಷವು ‌ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಮಾತ್ರವಲ್ಲದೆ ಸಾಧ್ಯವಾದರೆ ಕೇಂದ್ರಾಡಳಿತ ಪ್ರದೇಶದಲ್ಲಿಯೂ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದೂ ಅವರು ಹೇಳಿದ್ದಾರೆ.

ಈ ಮೂಲಕ ಇಂಡಿಯಾ ಮೈತ್ರಿಕೂಟದಿಂದ ಹೊರಬಂದು ಸ್ಪರ್ಧಿಸುತ್ತಿರುವ ಮೂರನೇ ಪಕ್ಷ ಇದಾಗಿದೆ. ಈ ಹಿಂದೆ ಎಎಪಿ ಮತ್ತು ತೃಣಮೂಲ ಕಾಂಗ್ರೆಸ್‌ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದವು. ಈಗ ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷ ಮೈತ್ರಿಕೂಟದಿಂದ ಹೊರಬಂದಿರುವುದು ವಿಪಕ್ಷಗಳ ಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

‘ಚುನಾವಣೆಗಳು ನಡೆಯುತ್ತವೆ. ವಿಧಾನಸಭೆ ಮತ್ತು ಲೋಕಸಭಾ ಎರಡೂ ಚುನಾವಣೆಗಳು ಒಟ್ಟಿಗೆ ನಡೆಯುತ್ತವೆ ಎಂದು ನಾನು ಭಾವಿಸುತ್ತೇನೆ. ಹೀಗಾಗಿ ಸೀಟು ಹಂಚಿಕೆ ಮಾಡಬೇಕಾಗಿರುವುದರಿಂದ ನ್ಯಾಷನಲ್ ಕಾನ್ಪರೆನ್ಸ್‌ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಫಾರೂಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್‌. ಎಎಪಿ, ಆರ್‌ಜೆಡಿ, ಶಿವಸೇನಾ (ಯುಬಿಟಿ) ತೃಣಮೂಲ ಕಾಂಗ್ರೆಸ್‌, ಡಿಎಂಕೆ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೊರಾಡಬೇಕೆಂದು ಇಂಡಿಯಾ ಮೈತ್ರಿಕೂಟವನ್ನು ಸ್ಥಾಪಿಸಿದ್ದವು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷ ಕೂಡ ವಿರೋಧ ಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ ಜತೆ ಸೇರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT