ನವದೆಹಲಿ: ‘ಕೇಂದ್ರ ಸಚಿವ ಸಂಪುಟವು ಬುಧವಾರ ಅಂಗೀಕರಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯು ಕಾರ್ಯಸಾಧುವಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಒಂದು ದೇಶ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, ‘ಕೆಲ ರಾಜ್ಯಗಳ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರವನ್ನು ಹೂಡಿದೆ’ ಎಂದಿದ್ದಾರೆ.
‘ಇದು ಪ್ರಾಯೋಗಿಕವಾಗಿ ಅಸಾಧ್ಯ. ಯಾವುದೇ ಚುನಾವಣೆ ಬಂದರೂ, ಒಂದು ವಿಷಯವನ್ನು ಚರ್ಚೆಗೆ ಹುಡುಕಿಕೊಳ್ಳುವುದು ಬಿಜೆಪಿಯವರ ತಂತ್ರ. ಇದರಿಂದ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಮರೆಮಾಚಿ, ಈ ವಿಷಯವನ್ನೇ ಚರ್ಚಿಸುವಂತೆ ಮಾಡುತ್ತಾರೆ’ ಎಂದಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ಘೋಷಣೆ ಸಂದರ್ಭದಲ್ಲಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ, ಒಂದು ಚುನಾವಣೆ’ ಕುರಿತ ತನ್ನ ವರದಿಯನ್ನು ಸಲ್ಲಿಸಿತ್ತು.