ಮುಂಬೈ: ಮಹಾರಾಷ್ಟ್ರ ಸರ್ಕಾರ ತನ್ನ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲು ಹೊರಡಿಸಿರುವ ಎರಡು ಆದೇಶಗಳನ್ನು ರದ್ದುಗೊಳಿಸುವಂತೆ ಕೋರಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್.ಜೆ.ಜಮಾದಾರ್ ಅವರನ್ನೊಳ ಗೊಂಡ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸುವ ಮುನ್ನ,‘ಇದೊಂದು ಸೇವಾ ಸಂಬಂಧಿತ ವಿಷಯವಾಗಿದ್ದು, ಸಿಂಗ್ ಕೇಳಿರುವ ಪರಿಹಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಆಡಳಿತ ನ್ಯಾಯಮಂಡಳಿ ತೀರ್ಪು ನೀಡಬಹುದು‘ ಎಂದು ಹೇಳಿದೆ.
ಸಿಂಗ್ ಅವರು ತಮ್ಮ ಅರ್ಜಿಯಲ್ಲಿ ರಾಜ್ಯ ಸರ್ಕಾರ ತಮ್ಮ ವಿರುದ್ಧ ‘ಕರ್ತವ್ಯ ನಿರ್ಲಕ್ಷ್ಯ ಹಾಗೂ ದುರ್ನಡತೆ ಮತ್ತು ಭ್ರಷ್ಟಾಚಾರ ‘ ಕುರಿತು ಪ್ರಾಥಮಿಕ ವಿಚಾರಣೆ ನಡೆಸಲು ಆದೇಶಿಸಿರುವುದನ್ನು ರದ್ದುಗೊಳಿಸುವಂತೆ ಕೋರಿದ್ದರು.