ದೇಶದಾದ್ಯಂತ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.
'ಲೋಕಲ್ ಫಾರ್ ವೋಕಲ್' ಎಂಬ ಮಂತ್ರವನ್ನು ನಾವು ನೀಡಿದ್ದೇವೆ. ಇಂದು ಸ್ಥಳೀಯ ಆರ್ಥಿಕ ವ್ಯವಸ್ಥೆಗೆ 'ಲೋಕಲ್ ಫಾರ್ ವೋಕಲ್' ಹೊಸ ಮಂತ್ರವಾಗುತ್ತಿರುವುದು ನನಗೆ ಖುಷಿ ತಂದಿದೆ. ಪ್ರತಿಯೊಂದು ಜಿಲ್ಲೆಯೂ ತನ್ನ ಉತ್ಪನ್ನಗಳ ಬಗ್ಗೆ ಹೆಮ್ಮೆ ಪಡಲು ಪ್ರಾರಂಭಿಸಿದೆ. 'ಒಂದು ಜಿಲ್ಲೆ ಒಂದು ಉತ್ಪನ್ನ' ಎಂಬ ಪರಿಸರವಿದೆ ಎಂದಿದ್ದಾರೆ.
'ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶ ಎಂದು ಚಿರಋಣಿಯಾಗಿದ್ದು, ಅವರ ತ್ಯಾಗ, ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
'2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವನ್ನಾಗಿ ಮಾಡುವ ನಮ್ಮ ಸಂಕಲ್ಪಕ್ಕೆ ಬದ್ಧರಾಗಿದ್ದೇವೆ. ವಿಕಸಿತ ಭಾರತ ಕೇವಲ ಒಂದು ಪದವಲ್ಲ. 140 ಕೋಟಿ ಭಾರತೀಯರ ಸಂಕಲ್ಪ ಮತ್ತು ಕನಸುಗಳ ಪ್ರತಿಬಿಂಬವಾಗಿದೆ' ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸತತ 11ನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಅವರು ಸತತ 10 ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದ್ದರು. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು 17 ಬಾರಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 16 ಬಾರಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದರು.
'ಸುಮಾರು 10 ಕೋಟಿ ಮಹಿಳೆಯರು ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದನ್ನು ನೋಡಿ ನಾವು ಹೆಮ್ಮೆಪಡುತ್ತೇವೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಲಕ್ಷ-ಕೋಟಿ ಖರ್ಚು ಮಾಡುತ್ತಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ನಾವು 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ನಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಮಾಡಿದ್ದೇವೆ. ಹಿಂದಿನ ಹಲವು ನಿರ್ಬಂಧಗಳನ್ನು ತೆರವುಗೊಳಿಸಿದ್ದೇವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ನೂರಾರು ಸ್ಟಾರ್ಟ್‌ಅಪ್‌ಗಳು ಬಂದಿವೆ. ಇದು ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಿಲು ನಾವು ಮಹತ್ತರ ಕ್ರಮ ಕೈಗೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.