ಅಹಮದಾಬಾದ್: ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರದೀಪ್‌ಸಿಂಗ್ ವಘೇಲಾ ರಾಜೀನಾಮೆ ನೀಡಿದ್ದಾರೆ.
ಕೆಲವೇ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
2016ರ ಆಗಸ್ಟ್ ತಿಂಗಳಲ್ಲಿ ಪ್ರದೀಪ್‌ಸಿಂಗ್ ವಘೇಲಾ ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕವಾಗಿದ್ದರು. ದಕ್ಷಿಣ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್ ಅವರ ಜೊತೆಗಿನ ಮುಸುಕಿನ ಗುದ್ದಾಟವೇ ಪ್ರದೀಪ್‌ಸಿಂಗ್ ರಾಜೀನಾಮೆಗೆ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರದೀಪ್‌ಸಿಂಗ್ ಅವರು ಕೆಲವು ದಿನಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ ರಾಜೀನಾಮೆಗೆ ಕಾರಣಗಳನ್ನು ಉಲ್ಲೇಖಿಸಿಲ್ಲ ಎಂದು ಎಎನ್‌ಐ ಸುದ್ದಿಸಂಸ್ಥೆ ಹೇಳಿದೆ.
ಪ್ರದೀಪ್‌ಸಿಂಗ್ ಈ ಹಿಂದೆ ಗುಜರಾತ್ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿದ್ದರು. ಗುಜರಾತ್ ಬಿಜೆಪಿ ನಾಲ್ಕು ಪ್ರಧಾನ ಕಾರ್ಯದರ್ಶಿ ಹುದ್ದೆಗಳನ್ನು ಹೊಂದಿದೆ. ವಘೇಲಾ ರಾಜೀನಾಮೆಯೊಂದಿಗೆ, ಪಕ್ಷದಲ್ಲೀಗ ರಜನಿ ಪಟೇಲ್ ಮತ್ತು ವಿನೋದ್ ಚಾವ್ಡಾ ಮಾತ್ರ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಪ್ರಧಾನ ಕಾರ್ಯದರ್ಶಿ ಭಾರ್ಗವ್ ಭಟ್ ಅವರನ್ನು ಬಿಜೆಪಿ ಹೈಕಮಾಂಡ್ ಈ ಹುದ್ದೆಯಿಂದ ಬಿಡುಗಡೆ ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.