ನವದೆಹಲಿ: ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳಿಗೆಆದ್ಯತೆ ಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾರಾಜ್ಯಗಳಿಗೆ ಸಲಹೆ ನೀಡಿದ್ದಾರೆ.
ನವದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ (ಎನ್‌ಎಸ್‌ಎಸ್) ಸಮಾವೇಶದ ಸಮಾರೋಪವನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ವಿಶೇಷವಾಗಿ ಗಡಿ ಜಿಲ್ಲೆಗಳಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.
ರಾಜ್ಯಗಳ ಡಿಜಿಪಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಂತ್ರಿಕ ಹಾಗೂ ಕಾರ್ಯತಂತ್ರಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಗಡಿ ಜಿಲ್ಲೆಗಳಲ್ಲಿ ತಳಮಟ್ಟದಲ್ಲಿ ಹಂಚಿಕೊಳ್ಳಬೇಕು ಎಂದು ಹೇಳಿದರು.
ಆಂತರಿಕ ಭದ್ರತೆ ಬಗ್ಗೆ ವಿವರಣೆ ನೀಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ, ಈಶಾನ್ಯ ರಾಜ್ಯಗಳಲ್ಲಿ ಉಗ್ರಗಾಮಿ ಸಂಘಟನೆಗಳ ಬೆದರಿಕೆಯನ್ನು ತಟಸ್ಥಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಕಾನೂನುಗಳನ್ನು ರೂಪಿಸಿ ರಾಜ್ಯಗಳೊಂದಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡಿದ್ದು, ತಂತ್ರಜ್ಞಾನದ ಗರಿಷ್ಠ ಬಳಕೆ ಮಾಡಿದ್ದೇವೆ ಎಂದು ಹೇಳಿದರು.
2014ರಲ್ಲಿ ಮೋದಿ, ಪ್ರಧಾನಿ ಹುದ್ದೆಗೇರಿದ ಬಳಿಕ ರಾಷ್ಟ್ರೀಯ ಭದ್ರತಾ ಕಾರ್ಯವಿಧಾನವನ್ನು ಬಲಪಡಿಸಲಾಗಿದೆ. ದೇಶದ ಯುವ ಜನತೆಯ ಭವಿಷ್ಯಕ್ಕಾಗಿ ನಡೆಯುವ ಈ ಹೋರಾಟವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು ಎಂದು ಅವರು ಒತ್ತಿ ಹೇಳಿದರು.