ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ: ರಾಹುಲ್‌ಗೆ ಅವಿಮುಕ್ತೇಶ್ವರಾನಂದ ಬೆಂಬಲ

ಗೌರವ್ ಮಹೇಂದ್ರ ಮಿಶ್ರಾ
Published 10 ಜುಲೈ 2024, 12:52 IST
Last Updated 10 ಜುಲೈ 2024, 12:52 IST
ಅಕ್ಷರ ಗಾತ್ರ

ನವದೆಹಲಿ: ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ. ಆದೇ ರೀತಿ ಹಿಂಸಾಚಾರ ಮಾಡುವವರು ಹಿಂದೂಗಳಲ್ಲ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

‘ನಾವು ರಾಹುಲ್ ಗಾಂಧಿಯವರ ಭಾಷಣವನ್ನು ಸಂಪೂರ್ಣವಾಗಿ ಕೇಳಿದ್ದೇವೆ. ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರು (ರಾಹುಲ್ ಗಾಂಧಿ) ಎಲ್ಲಿಯೂ ಹಿಂದೂ ಧರ್ಮಕ್ಕೆ ವಿರುದ್ಧವಾಗಿ ಏನನ್ನೂ ಹೇಳಿಲ್ಲ. ಅವರ ಹೇಳಿಕೆಯ ಆಯ್ದ ಭಾಗವನ್ನು ಮಾತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಲಾಗುತ್ತಿದೆ. ಇದು ಅಪರಾಧ’ ಎಂದು ಹೇಳಿದ್ದಾರೆ.

ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್‌ ತನ್ನ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿದೆ. ಜತೆಗೆ, ಅವಿಮುಕ್ತೇಶ್ವರಾನಂದ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ–ವಿರೋಧದ ಚರ್ಚೆಯೂ ಜೋರಾಗಿದೆ.

ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಮೊದಲ ಭಾಷಣ ಮಾಡಿದ್ದ ಅವರು ಆಡಳಿತರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

‘ತಮ್ಮನ್ನು ತಾವು ಹಿಂದೂಗಳೆಂದು ಕರೆದುಕೊಳ್ಳುವವರು ಹಿಂಸಾಚಾರ ಹಾಗೂ ದ್ವೇಷದಲ್ಲಿ ಹಗಲಿರುಳು ನಿರತರಾಗಿದ್ದಾರೆ’ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಗಿತ್ತು.

ರಾಹುಲ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ‘ಇಡೀ ಹಿಂದೂ ಸಮಾಜವು ಹಿಂಸಾಪ್ರವೃತ್ತಿಯಿಂದ ಕೂಡಿದೆ ಎಂದು ಕರೆಯುವುದು ತುಂಬಾ ಗಂಭೀರ ವಿಷಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಡಳಿತ ಪಕ್ಷ ಹಾಗೂ ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ ಮೇಲೆ ಕಾಂಗ್ರೆಸ್‌ ನಾಯಕನ ಮೊನಚಾದ ದಾಳಿಗೆ ಪ್ರಧಾನಿ ಎರಡು ಸಲ ಮಧ್ಯಪ್ರವೇಶಿಸಿ ಆಕ್ಷೇಪಿಸಿದ್ದರು.

ರಾಹುಲ್‌ ಭಾಷಣಕ್ಕೆ ಆಡಳಿತ ಪಕ್ಷದ ಸದಸ್ಯರು ಪದೇ ಪದೇ ಅಡ್ಡಿಪಡಿಸಿದ್ದರು. 6–7 ಸಚಿವರು ಎದ್ದು ನಿಂತು ಕ್ಷಮೆಯಾಚನೆಗೆ ಪಟ್ಟು ಹಿಡಿದಿದ್ದರು. ಆಗ ರಾಹುಲ್‌ ಜೋರಾಗಿ, ‘ನಾನು ಹಿಂದೂ ಸಮುದಾಯದ ಬಗ್ಗೆ ಹೇಳಿಲ್ಲ. ಹಿಂದೂ ಯಾವತ್ತೂ ದ್ವೇಷ ಹಾಗೂ ಹಿಂಸೆಯನ್ನು ಹರಡುವುದಿಲ್ಲ. ಮೋದಿ ಎಂದರೆ ಇಡೀ ಹಿಂದೂ ಸಮಾಜವಲ್ಲ, ಬಿಜೆಪಿ ಎಂದರೆ ಇಡೀ ಹಿಂದೂ ಸಮಾಜವಲ್ಲ. ಆರ್‌ಎಸ್‌ಎಸ್ ಇಡೀ ಹಿಂದೂ ಸಮಾಜವಲ್ಲ. ಬಿಜೆಪಿ ದ್ವೇಷ ಹಾಗೂ ಹಿಂಸಾಚಾರವನ್ನು ಹರಡುತ್ತದೆ’ ಎಂದು ತಿರುಗೇಟುಕೊಟ್ಟಿದ್ದರು.

ಇದಾದ ಬಳಿಕ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಮುಖಂಡ ಸುಧಾಂಶು ತ್ರಿವೇದಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಹುಲ್‌ ಹೇಳಿಕೆಯನ್ನು ಖಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT