ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ ಬಗ್ಗೆ ಮೋದಿ ‘ಮೌನ’: ರಾಹುಲ್ ಟೀಕೆ

Published 18 ಜೂನ್ 2024, 16:29 IST
Last Updated 18 ಜೂನ್ 2024, 16:29 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನೀಟ್‌ ಪರೀಕ್ಷೆ ವಿಷಯದಲ್ಲಿ ‘ಮೌನ’ ಕಾಪಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಬಲ ಕಾನೂನು ರೂಪಿಸಲು ತಮ್ಮ ಪಕ್ಷವು ಬೀದಿಗಳಿಂದ ಹಿಡಿದು ಸಂಸತ್ತಿನವರೆಗೂ ಯುವಜನರ ಧ್ವನಿಯಾಗಲು ಬದ್ಧವಾಗಿದೆ ಎಂದು ಪ್ರತಿಪಾದಿಸಿದರು. 

ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ಕೆಲವರನ್ನು ಬಂಧಿಸಿರುವುದು, ನೀಟ್‌ ಪರೀಕ್ಷೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಅಕ್ರಮ ನಡೆದಿರುವುದನ್ನು ಸ್ಪಷ್ಟಪಡಿಸುತ್ತದೆ. ಬಿಜೆಪಿ ಆಡಳಿತವಿರುವ ಈ ರಾಜ್ಯಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ‘ಕೇಂದ್ರ’ಗಳಾಗಿವೆ ಎಂದು ಆರೋಪಿಸಿದರು.

‘ನೀಟ್ ಪರೀಕ್ಷೆ ಬರೆದ 24 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಆದರೆ ನರೇಂದ್ರ ಮೋದಿ ಎಂದಿನಂತೆ ಮೌನ ವಹಿಸಿದ್ದಾರೆ’ ಎಂದು ರಾಹುಲ್‌ ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ರೂಪಿಸುವ ಮೂಲಕ ಯುವಕರ ಭವಿಷ್ಯವನ್ನು ಸುಭದ್ರಗೊಳಿಸುವ ಭರವಸೆಯನ್ನು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿತ್ತು. ಪ್ರಬಲ ಕಾನೂನು ರೂಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಎಎಪಿ ಪ್ರತಿಭಟನೆ ನವದೆಹಲಿ (ಪಿಟಿಐ): ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷವು (ಎಎಪಿ)  ಮಂಗಳವಾರ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು. ನೀಟ್‌ ಪರೀಕ್ಷೆ ಅಕ್ರಮ ಆರೋಪಗಳ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು ಎಂದು ಪ‍ಕ್ಷದ ಮುಖಂಡ ದೆಹಲಿ ಆರೋಗ್ಯ ಸಚಿವ ಸೌರಭ್‌ ಭಾರದ್ವಾಜ್‌ ಆಗ್ರಹಿಸಿದರು. ‘ಸುಮಾರು 24 ಲಕ್ಷ ವಿದ್ಯಾರ್ಥಿಗಳು ನೀಟ್‌ ಪರೀಕ್ಷೆಗೆ ಹಾಜರಾಗಿದ್ದರು. ಅವರು ಪರೀಕ್ಷೆಗಾಗಿ ಪ್ರತಿ ದಿನ 16 ರಿಂದ 18 ಗಂಟೆ ತಯಾರಿ ನಡೆಸಿದ್ದರು. ಆದರೆ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಲಂಚ ನೀಡಿದ್ದಾರೆ ಎಂಬುದನ್ನು ಜನರು ಹಿಂದೆಂದೂ ಕೇಳಿರಲಿಲ್ಲ’ ಎಂದರು. ಪಟ್ನಾದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ನೀಟ್‌ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೆ ಒಂದು ದಿನ ಮುಂಚಿತವಾಗಿ ಲಭಿಸಿತ್ತು ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT