ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲಿಜಿಯಂ ನೀಡಿದ ಕಾರಣ ಬಹಿರಂಗಪಡಿಸಲಾಗದು: ದೆಹಲಿ ಹೈಕೋರ್ಟ್

Published 4 ಜುಲೈ 2024, 15:42 IST
Last Updated 4 ಜುಲೈ 2024, 15:42 IST
ಅಕ್ಷರ ಗಾತ್ರ

ನವದೆಹಲಿ: ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು ಮಾಡಿದ ಹೆಸರುಗಳನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ತಿರಸ್ಕರಿಸಲು ನೀಡಿರುವ ಕಾರಣಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಆಗದು ಎಂದು ದೆಹಲಿ ಹೈಕೋರ್ಟ್‌ ಗುರುವಾರ ಹೇಳಿದೆ.

‘ನ್ಯಾಯಮೂರ್ತಿಗಳ ಆಯ್ಕೆ ವೇಳೆ ಕೊಲಿಜಿಯಂ, ವ್ಯಕ್ತಿಯ ಖಾಸಗಿ ಮಾಹಿತಿಗಳ ಆಧಾರದ ಮೇಲೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತದೆ. ಅಂತಹ ಮಾಹಿತಿಯನ್ನು ಸಾರ್ವಜನಿಕಗೊಳಿಸಿದರೆ, ಆ ವ್ಯಕ್ತಿಯ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತದೆ ಹಾಗೂ ಇಡೀ ನೇಮಕಾತಿ ಪ್ರಕ್ರಿಯೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡುತ್ತದೆ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಮತ್ತು ನ್ಯಾಯಮೂರ್ತಿ ತುಷಾರ್‌ ರಾವ್ ಅವರಿದ್ದ ವಿಭಾಗೀಯ ಪೀಠ ಹೇಳಿತು. 

ಕೊಲಿಜಿಯಂ ಶಿಫಾರಸು ಮಾಡಿದ ಹೆಸರಿಗಳನ್ನು ತಿರಸ್ಕರಿಸಲು ನೀಡಿರುವ ಕಾರಣಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್‌ಗೆ ನಿರ್ದೇಶನ ನೀಡಬೇಕೆಂದು ಕೋರಿ ರಾಕೇಶ್ ಕುಮಾರ್ ಗುಪ್ತಾ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವಾಗ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು. 

ರಾಕೇಶ್‌ ಕುಮಾರ್‌ ಅವರು ಈ ಹಿಂದೆ ಇದೇ ವಿಚಾರವಾಗಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಏಕಸದಸ್ಯ ಪೀಠ ತಿರಸ್ಕರಿಸಿ ₹25 ಸಾವಿರ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ವಿಭಾಗೀಯ ಪೀಠದ ಮೊರೆ ಹೋಗಿದ್ದರು.

ಕೊಲಿಜಿಯಂ ಶಿಫಾರಸು ಮಾಡಿದ ಹೆಸರುಗಳನ್ನು ತಿರಸ್ಕರಿಸುವ ಪ್ರಮಾಣ 2021ರಲ್ಲಿ ಶೇ 4.38 ಆಗಿದ್ದರೆ, 2023ರಲ್ಲಿ ಅದು ಶೇ 35.29ಕ್ಕೆ ಹೆಚ್ಚಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT