ಚಂಡೀಗಢ: ಭಕ್ತರಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ. ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿಯ ಬಿಧರನಾ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಿಸಾರ್‌ನ ಜಿಂದ್ ಮತ್ತು ಆಗ್ರೋಹಾ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಕುಲದೀಪ್ ತಿಳಿಸಿದ್ದಾರೆ.
ಕುರುಕ್ಷೇತ್ರ ಜಿಲ್ಲೆಯಿಂದ ರಾಜಸ್ಥಾನದ ಗೊಗಮೇಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಭಕ್ತರನ್ನು ಹೊತ್ತಿದ್ದ ವಾಹನವನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಜನ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.