ನವದೆಹಲಿ: ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಜಾಮೀನು ಕೋರಿ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎರಡು ವಾರ ಕಾಲ ಮುಂದೂಡಿತು.
ಅರ್ಜಿ ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಬೆಲಾ ಎಂ. ತ್ರಿವೇದಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು. ಅರ್ಜಿದಾರರ ಪರ ವಕೀಲ ಕಪಿಲ್ ಸಿಬಲ್ ಅವರು ಇದಕ್ಕೆ ಸಹಮತ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆಗಸ್ಟ್ 9ರಂದು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಖಾಲಿದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಅ. 18, 2022ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಖಾಲಿದ್ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿದಾರರ ವಿರುದ್ಧದ ಆರೋಪವು ಮೇಲ್ನೋಟಕ್ಕೆ ನಿಜವಾಗಿದೆ. ಇತರೆ ಆರೋಪಿಗಳ ಜೊತೆಗೆ ಅರ್ಜಿದಾರ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಈ ಹಿಂದೆ ಜಾಮೀನು ಅರ್ಜಿ ತಿರಸ್ಕರಿಸಲು ದೆಹಲಿ ಹೈಕೋರ್ಟ್ ಕಾರಣ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.