ನವದೆಹಲಿ: ದೇಶದಲ್ಲಿ ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯು ತ್ವರಿತವಾಗಿ ನಡೆಯುವಂತೆ ನೋಡಿಕೊಳ್ಳಲು ವಿಶೇಷ ಪೀಠ ರಚಿಸಬೇಕು ಎಂದು ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ ಹೆಚ್ಚಿನ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಇಂತಹ ಪ್ರಕರಣಗಳಲ್ಲಿ ‘ಅಪರೂಪದ ಹಾಗೂ ಬಲವಾದ ಕಾರಣಗಳು ಇಲ್ಲದಿದ್ದರೆ ವಿಶೇಷ ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡಬಾರದು’ ಎಂದು ಕೂಡ ಸುಪ್ರೀಂ ಕೋರ್ಟ್ ಸೂಚಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಹಲವು ಸೂಚನೆಗಳನ್ನು ನೀಡಿದೆ.
ಹೈಕೋರ್ಟ್‌ಗಳು, ಜಿಲ್ಲಾ ನ್ಯಾಯಾಧೀಶರು ಹಾಗೂ ಶಾಸಕರು, ಸಂಸದರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯಗಳಿಗೆ ಹಲವು ಮಾರ್ಗದರ್ಶನಗಳನ್ನು ನೀಡಿರುವ ಸುಪ್ರೀಂ ಕೋರ್ಟ್, ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದೆ.
ದೇಶದಾದ್ಯಂತ ಇರುವ ವಿಚಾರಣಾ ನ್ಯಾಯಾಲಯಗಳಿಗೆ ಅನ್ವಯವಾಗುವಂತೆ ಏಕರೂಪಿ ಮಾರ್ಗಸೂಚಿ ಹೊರಡಿಸಲು ಹಲವು ಕಾರಣಗಳಿಂದ ಸಾಧ್ಯವಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹೈಕೋರ್ಟ್‌ಗಳು ತಮ್ಮ ವೆಬ್‌ಸೈಟ್ ಮೂಲಕ, ಇಂತಹ ಪ್ರಕರಣಗಳ ಜಿಲ್ಲಾವಾರು ವಿವರ ನೀಡಬೇಕು ಎಂದು ಸೂಚಿಸಲಾಗಿದೆ.