ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋಯಿನಪಲ್ಲಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಸ್ತರಿಸಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಲಭ್ಯವಿರದ ಕಾರಣ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು.
ಈ ಸಂದರ್ಭದಲ್ಲಿ, ಪಾಸ್‌ಪೋರ್ಟ್ ಸಲ್ಲಿಸುವಂತೆ ಮತ್ತು ಹೈದರಾಬಾದ್ ಭೇಟಿ ಹೊರತಾಗಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ತೊರೆಯದಂತೆ ಬೋಯಿನಪಲ್ಲಿ ಅವರಿಗೆ ಕೋರ್ಟ್ ಸೂಚನೆ ನೀಡಿತು.
ಬೋಯಿನಪಲ್ಲಿ ಅವರ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ‘ಅರ್ಜಿದಾರರನ್ನು 2022 ಅಕ್ಟೋಬರ್‌ನಲ್ಲಿ ಬಂಧಿಸಲಾಗಿದೆ’ ಎಂದು ಕೋರ್ಟ್‌ಗೆ ತಿಳಿಸಿದರು. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಪ್ರಕರಣವನ್ನು ಉಲ್ಲೇಖಿಸಿದರು.
ಕಳೆದ ಮಾರ್ಚ್ 20ರಂದು ಸುಪ್ರೀಂಕೋರ್ಟ್ ಬೋಯಿನಪಲ್ಲಿ ಅವರಿಗೆ ಐದು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಹಲವು ಬಾರಿ ಜಾಮೀನು ಅವಧಿಯನ್ನು ವಿಸ್ತರಿಸಲಾಗಿದೆ.