ನವದೆಹಲಿ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಇರುವ ಮೀಸಲಾತಿಯನ್ನು ಶೇ 50ರಿಂದ ಶೇ 65ಕ್ಕೆ ಹೆಚ್ಚಿಸಿದ್ದನ್ನು ರದ್ದು ಮಾಡಿ ಪಟ್ನಾ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಆರ್‌ಜೆಡಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಬಿಹಾರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.
‘ಮೀಸಲಾತಿ ಪ್ರಮಾಣ ಹೆಚ್ಚಿಸಿ ಬಿಹಾರ ಸರ್ಕಾರ ರೂಪಿಸಿರುವ ಕಾಯ್ದೆ ಸಂವಿಧಾನದ 14,15 ಮತ್ತು 16ನೇ ವಿಧಿಗಳಿಗೆ ವಿರುದ್ಧವಾಗಿದೆ’ ಎಂದು ಪಟ್ನಾ ಹೈಕೋರ್ಟ್‌ನ ದ್ವಿಸದಸ್ಯ ಪೀಠ, ಮೀಸಲಾತಿ ಹೆಚ್ಚಳ ರದ್ದುಪಡಿಸಿ ಜೂನ್ 20ರಂದು ಆದೇಶಿಸಿತ್ತು.
ಪಟ್ನಾ ಹೈಕೋರ್ಟ್ ಅದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಜುಲೈ 29 ರಂದು ನಿರಾಕರಿಸಿತ್ತು.
ಈಗ, ಹೈಕೋರ್ಟ್ ಆದೇಶ ಪ್ರಶ್ನಿಸಿ ಆರ್‌ಜೆಡಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.