ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆ ಪ್ರಶ್ನಿಸಿರುವ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಅವಕಾಶ ಕಲ್ಪಿಸಿದೆ.
ದೆಹಲಿ ಸರ್ಕಾರ ಮೊದಲಿಗೆ ಸುಗ್ರೀವಾಜ್ಞೆಯನ್ನು ಪ್ರಶ್ನೆ ಮಾಡಿತ್ತು. ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ಸಿಕ್ಕಿದ್ದು, ಸದ್ಯ ಅದು ಕಾಯ್ದೆಯಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ನೇತೃತ್ವದ ಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿತು. ತಿದ್ದುಪಡಿಗೆ ತನ್ನದೇನೂ ಆಕ್ಷೇಪ ಇಲ್ಲ ಎಂದು ಕೇಂದ್ರ ಸರ್ಕಾರವೂ ಹೇಳಿದೆ.
ತಿದ್ದುಪಡಿಯಾಗಿ ಸಲ್ಲಿಕೆಯಾಗುವ ಅರ್ಜಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಸಿದೆ.
ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಸಂಬಂಧ ಕೇಂದ್ರ ಸರ್ಕಾರ ಮೇ 19ರಂದು ಸುಗ್ರೀವಾಜ್ಞೆ ಹೊರಡಿಸಿತ್ತು. ಇದರ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಗ್ರೀವಾಜ್ಞೆಯನ್ನು ಬದಲಿಸುವ ‘ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ (ತಿದ್ದುಪಡಿ) ಮಸೂದೆ’ಗೆ ಕೇಂದ್ರ ಸಚಿವ ಸಂಪುಟ ಜುಲೈ 25 ಅನುಮೋದನೆ ನೀಡಿತ್ತು. ಆ.7ರಂದು ಸಂಸತ್ತಿನಲ್ಲಿ ಮಂಡನೆಯಾಗಿದ್ದ ಈ ಮಸೂದೆ ಅನುಮೋದನೆ ಪಡೆದು, ಕಾಯ್ದೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.