ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಿರಾಕರಣೆ

Published 22 ಸೆಪ್ಟೆಂಬರ್ 2023, 15:55 IST
Last Updated 22 ಸೆಪ್ಟೆಂಬರ್ 2023, 15:55 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ - ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನ ನೀಡುವಂತೆ ಕೋರಿ ‘ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್ ಟ್ರಸ್ಟ್’ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಟ್ರಸ್ಟ್‌ನ ಅರ್ಜಿಯನ್ನು ವಜಾಗೊಳಿಸಿತು.

ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಸಿಪಿಸಿ ಆದೇಶ 26 ನಿಯಮ 11ರ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಅಲಹಾಬಾದ್ ಹೈಕೋರ್ಟ್ ಇನ್ನೂ ನಿರ್ಧರಿಸಿಲ್ಲ ಎಂಬುದನ್ನು ನ್ಯಾಯಪೀಠವು ಪರಿಗಣನೆಗೆ ತೆಗೆದುಕೊಂಡಿದೆ.

‘ಈ ಪ್ರಕರಣದಲ್ಲಿ ಆದೇಶ ನೀಡುವುದು ವಿಚಾರಣಾ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗದು. ಅಲ್ಲದೇ, ಪ್ರಕರಣವನ್ನು ವರ್ಗಾಯಿಸಿದ ನಂತರ ನ್ಯಾಯಾಲಯದ ವ್ಯಾಪ್ತಿಗೆ ಸಂಬಂಧಿಸಿ ಹೈಕೋರ್ಟ್‌ ಮಾತ್ರ ಪರಿಷ್ಕರಣೆ ಮಾಡಬಹುದು ಎಂದು ಒತ್ತಾಯಿಸಲಾಗದು‘ ಎಂದು ನ್ಯಾಯಪೀಠ ಹೇಳಿತು.

‘ಅರ್ಜಿಯು ಸಮರ್ಥನೀಯವೇ ಅಥವಾ ಅಲ್ಲವೇ ಹಾಗೂ ಇತರ ವಿಷಯಗಳನ್ನು ಹೈಕೋರ್ಟ್‌ ನಿರ್ಧರಿಸಲಿರುವ ಕಾರಣ, ಅರ್ಜಿದಾರರು ಹೈಕೋರ್ಟ್‌ಗೇ ಹೋಗಲಿ‘ ಎಂದು ಹೇಳಿತು.

‘ಏಕಸದಸ್ಯ ನ್ಯಾಯಪೀಠ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ನೀವೇಕೆ ಸುಪ್ರೀಂಕೋರ್ಟ್‌ ಕದ ತಟ್ಟಿದಿರಿ‘ ಎಂದು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಗೌರವ್‌ ಭಾಟಿಯಾ ಅವರನ್ನು ಪೀಠವು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಭಾಟಿಯಾ, ‘ಅರ್ಜಿಯನ್ನು ಹೈಕೋರ್ಟ್‌ಗೆ ವರ್ಗಾಯಿಸಿದ ನಂತರ, ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಬಾರದಿತ್ತು‘ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

‘ಒಂದು ವೇಳೆ, ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಹೈಕೋರ್ಟ್‌ಗೆ ಅನಿಸಿದಲ್ಲಿ ಅದು ನಿಮ್ಮ ಅರ್ಜಿಗೆ ತಡೆ ನೀಡುತ್ತದೆ. ಅಲ್ಲದೇ, ವಿಚಾರಣಾ ನ್ಯಾಯಾಲಯವು ತನ್ನ ಅಧಿಕಾರ ವ್ಯಾಪ್ತಿಯಲ್ಲಿಯೇ ಆದೇಶ ನೀಡಿದೆ‘ ಎಂದು ನ್ಯಾಯಪೀಠವು ಭಾಟಿಯಾ ಅವರನ್ನು ಉದ್ದೇಶಿಸಿ ಹೇಳಿತು.

ಮಸೀದಿ ನಿರ್ವಹಣಾ ಸಮಿತಿ ಹಾಗೂ ಉತ್ತರ ಪ್ರದೇಶ ಸುನ್ನಿ ಕೆಂದ್ರೀಯ ವಕ್ಫ್ ಮಂಡಳಿಯ ಅರ್ಜಿಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ, ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ಕೋರಿ ತಾನು ಸಲ್ಲಿಸಿರುವ ಅರ್ಜಿಯನ್ನು ಇತ್ಯರ್ಥಪಡಿಸುವಂತೆ ಮಥುರಾ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಿಗೆ ನಿರ್ದೇಶನ ನೀಡುವಂತೆ ಕೋರಿ ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಅಲಹಾಬಾದ್ ಹೈಕೋರ್ಟ್‌ ಜುಲೈನಲ್ಲಿ ಆದೇಶಿಸಿತ್ತು.

ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT