ನವದೆಹಲಿ: ನ್ಯಾಯಾಲಯದ ಕಲಾಪವೊಂದರಲ್ಲಿ ವಕೀಲೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಒಳಗೊಂಡಂತೆ ಐವರು ಹಿರಿಯ ನ್ಯಾಯಮೂರ್ತಿಗಳು ಶುಕ್ರವಾರ ಬೆಳಿಗ್ಗೆ ಸಭೆ ನಡೆಸಿ ನ್ಯಾ. ಶ್ರೀಶಾನಂದ ಅವರು ಆಡಿರುವ ಮಾತುಗಳ ಬಗ್ಗೆ ಚರ್ಚಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಲು ನಿರ್ಧರಿಸಿದರು. ಈ ಕುರಿತಂತೆ ವರದಿ ಸಲ್ಲಿಸುವಂತೆ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಹೇಳಿದೆ.
‘ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಅವರ ಹೇಳಿಕೆಯು ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಈ ಪ್ರಕರಣ ಕುರಿತ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರು ಸೂಚನೆ ಕೇಳಿದ ಬೆನ್ನಲ್ಲೇ, ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಅನ್ನು ಕೋರಲಾಗಿದೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.