ನವದೆಹಲಿ: ವಿವಾಹ ಸಂಬಂಧದ ಒಳಗೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ಕಾನೂನಿನ ಕ್ರಮದಿಂದ ನೀಡಿರುವ ರಕ್ಷಣೆಯು ಎಷ್ಟರಮಟ್ಟಿಗೆ ಕಾನೂನುಬದ್ಧ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಈ ವಿಚಾರವಾಗಿ ಪ್ರಮಾಣಪತ್ರ ಸಲ್ಲಿಸದೆ ಇರಲು ಕೇಂದ್ರ ಸರ್ಕಾರ ತೀರ್ಮಾನಿಸಿದರೂ, ಕಾನೂನಿನ ತತ್ವಗಳನ್ನು ಮಾತ್ರ ಆಧರಿಸಿ ಈ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಈ ವಿಚಾರದ ಬಗ್ಗೆ ಆದಷ್ಟು ಬೇಗ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದರು.
ವೈವಾಹಿಕ ಸಂಬಂಧದಲ್ಲಿ ನಡೆಯುವ ಅತ್ಯಾಚಾರವನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವುದಕ್ಕೆ ಸಂಬಂಧಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೋರ್ಟ್ 2023ರ ಜನವರಿಯಲ್ಲಿ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.