ನವದೆಹಲಿ: ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಮಹಿಳೆಯಾಗಿ ಬದಲಾಗುವ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಯು, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ನ್ಯಾಯ ಕೋರಬಹುದೇ ಎಂಬ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿದೆ.
ಬಾಂಬೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಒಪ್ಪಿದೆ. ಇದರ ವಿಚಾರಣೆಯು 2025ರಲ್ಲಿ ನಡೆಯಲಿದೆ.
ಶಸ್ತ್ರಚಿಕಿತ್ಸೆಯ ನಂತರದಲ್ಲಿ ಮಹಿಳೆಯಾಗಿ ಬದಲಾಗುವ ವ್ಯಕ್ತಿಯು ಈ ಕಾಯ್ದೆಯ ಅಡಿಯಲ್ಲಿ ನ್ಯಾಯ ಕೋರಬಹುದು ಎಂದು ಬಾಂಬೆ ಹೈಕೋರ್ಟ್ ಆದೇಶದಲ್ಲಿ ಹೇಳಲಾಗಿದೆ. ಪತಿಯು ತನ್ನ ಮಾಜಿ ಪತ್ನಿಗೆ ಜೀವನಾಂಶ ನೀಡಬೇಕು ಎಂದು ಅಧೀನ ನ್ಯಾಯಾಲಯವು ಆದೇಶಿಸಿತ್ತು. ಈ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿದೆ.
ಪತ್ನಿಯು ಮೊದಲು ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಯಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯಾಗಿ ಬದಲಾಗಿದ್ದರು. ಆ ನಂತರದಲ್ಲಿ ಅವರ ವಿವಾಹ ಆಗಿತ್ತು. ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಪತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.