ಜೈಪುರ: ರಾಜಸ್ಥಾನದಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿತ್ತು. ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಭಾರಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ಮಂಗಳವಾರ, ಬುಧವಾರ, ಗುರುವಾರ ಹಾಗೂ ಶುಕ್ರವಾರದಂದು ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸೋಮವಾರದಿಂದ ಮಂಗಳವಾರ ಬೆಳಿಗ್ಗೆ 8.30ರವರೆಗಿನ 24 ಗಂಟೆಗಳಲ್ಲಿ ರಾಜ್ಯದ ದೌಸಾ ಪ್ರದೇಶವೊಂದರಲ್ಲಿಯೇ 16.3 ಸೆಂ.ಮೀ ಮಳೆ ಸುರಿದಿದೆ.
ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಹಲವು ಜಿಲ್ಲೆಗಳು ಭಾಗಶಃ ನೀರಿನಲ್ಲಿ ಮುಳುಗಿವೆ. ಕೆಲವೆಡೆ ಪ್ರವಾಹ ಉಂಟಾಗಿದೆ. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸುಮಾರು 100 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ.