ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆ ಪ್ರದೇಶಗಳ ಸುತ್ತುಮುತ್ತ ಪರಿಸರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಹೇರಲಾಗಿದೆ.
‘ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ರಾಜ್‌ಘಾಟ್, ಐಟಿಒ, ಕೆಂಪು ಕೋಟೆ ಸಮೀಪದ ಪ್ರದೇಶಗಳಲ್ಲಿ ಸಿಆರ್‌ಪಿಸಿ (ಅಪರಾಧ ಪ್ರಕ್ರಿಯಾ ಸಂಹಿತೆ) ಸೆಕ್ಷನ್ 144ಅನ್ನು ಅನ್ವಯಿಸಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆಗಳನ್ನು ಅನುಮತಿಸಲಾಗುವುದಿಲ್ಲ’ ಎಂದು ದೆಹಲಿ ಪೊಲೀಸರು X(ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೆಹಲಿಯ ಕೆಲವು ಪ್ರದೇಶಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಜಾರಿಯಾಗುತ್ತಿದ್ದಂತೆ, ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ಇಂದು ಮಧ್ಯಾಹ್ನ (ಗುರುವಾರ) ನಿಗದಿಗೊಳಿಸಿದ್ದ ತಮ್ಮ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ.
ಬುಧವಾರ ರಾತ್ರಿ, ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕುಸ್ತಿಪಟುಗಳು ಗುರುವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಘೋಷಿಸಿದ್ದರು.
ನಿಗದಿತ ಪತ್ರಿಕಾಗೋಷ್ಠಿಯನ್ನು ಮುಂದೂಡಿದ ನಂತರ, ಶೀಘ್ರದಲ್ಲೇ ಮಾಧ್ಯಮ ಪ್ರತಿನಿಧಿಗಳಿಗೆ ಹೊಸ ಸಮಯ ಮತ್ತು ಸ್ಥಳವನ್ನು ತಿಳಿಸುತ್ತೇವೆ ಎಂದು ವಿನೇಶ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.