ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಬ್ಯಾಂಕುಗಳಿಗಾದ ಗತಿಯೇ ನಂದಿನಿಗೂ ಆಗಲಿದೆ: ಸಿದ್ದರಾಮಯ್ಯ ಎಚ್ಚರಿಕೆ

Last Updated 31 ಡಿಸೆಂಬರ್ 2022, 14:10 IST
ಅಕ್ಷರ ಗಾತ್ರ

ಬೆಂಗಳೂರು: ಚಿನ್ನದ ಮೊಟ್ಟೆ ಇಡುವ ಕೋಳಿಯ ಮೇಲೆ ಈಗ ಗುಜರಾತ್ ಕಾರ್ಪೊರೇಟ್ ಕುಳಗಳ ಕಣ್ಣು ಬಿದ್ದಿದೆ. ಕನ್ನಡಿಗರು ಈಗಲೇ ಎಚ್ಚೆತ್ತುಕೊಂಡು, ವಿರೋಧ ತೋರ್ಪಡಿಸದಿದ್ದರೆ ನಮ್ಮ ನಾಡಿನ ಬ್ಯಾಂಕುಗಳಿಗಾದ ಗತಿಯೇ ನಂದಿನಿಗೂ ಆಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಗೆ ಶುಕ್ರವಾರ ಚಾಲನೆ ನೀಡಿದ್ದ ಅಮಿತ್‌ ಶಾ ಅವರು, ಗುಜರಾತ್‌ ಮತ್ತು ಕರ್ನಾಟಕದ ಹಾಲು ಒಕ್ಕೂಟಗಳನ್ನು ವಿಲೀನಗೊಳಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದರು.

‘ಗುಜರಾತ್‌ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975ರಿಂದಲೂ ಕೆಎಂಎಫ್‌ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದಿದ್ದರು.

ಅಮಿತ್‌ ಶಾ ಅವರ ಹೇಳಿಕೆ ಕುರಿತ ಮಾಧ್ಯಮ ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಅಮುಲ್‌–ನಂದಿನಿ ವಿಲೀನಕ್ಕೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಅವರೂ ಧ್ವನಿಗೂಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್‌ ಪ್ರಕಟಿಸಿರುವ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಕರ್ನಾಟಕ ಹಾಲು ಮಹಾ ಮಂಡಳವು ಗುಜರಾತ್ ಅಮುಲ್ ಜೊತೆಗೂಡಬೇಕೆಂಬ ಬಯಕೆಯನ್ನು ಗೃಹ ಸಚಿವ ಅಮಿತ್ ಶಾ ಅವರು ವ್ಯಕ್ತಪಡಿಸಿದ್ದಾರೆ. ಕನ್ನಡಿಗರು ಈಗಲೇ ಎಚ್ಚೆತ್ತುಕೊಂಡು, ವಿರೋಧ ತೋರ್ಪಡಿಸದಿದ್ದರೆ ನಮ್ಮ ನಾಡಿನ ಬ್ಯಾಂಕುಗಳಿಗಾದ ಗತಿಯೇ ನಂದಿನಿಗೂ ಆಗಲಿದೆ’ ಎಂದು ಎಚ್ಚರಿಸಿದ್ದಾರೆ.

‘ನಮ್ಮ ರಾಜ್ಯದ ಹಾಲು ಉತ್ಪಾದಕ ರೈತರು ಸುಮಾರು ₹20,000 ಕೋಟಿ ವರೆಗೆ ಹಾಲಿನ ವಹಿವಾಟು ಮಾಡುತ್ತಾರೆ. ಇವರ ಬದುಕು ನಿಂತಿರುವುದು ಹೈನುಗಾರಿಕೆಯ ಮೇಲೆ. ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ಖರ್ಚಿನಿಂದ ಹಿಡಿದು, ಅಕ್ಕಿ, ಬೇಳೆ, ಬಟ್ಟೆ- ಬರೆ ಮುಂತಾದವುಗಳೆಲ್ಲ ಹಾಲಿನಿಂದಲೆ ಬರಬೇಕು. ಇಂಥ ಚಿನ್ನದ ಮೊಟ್ಟೆ ಇಡುವ ಕೋಳಿಯ ಮೇಲೆ ಈಗ ಗುಜರಾತ್ ಕಾರ್ಪೊರೇಟ್ ಕುಳಗಳ ಕಣ್ಣು ಬಿದ್ದಿದೆ. ಅವರ ಕಣ್ಣು ಬಿದ್ದ ಕಡೆ, ಅವರು ಕಾಲು ಇಟ್ಟ ಕಡೆ ಎಲ್ಲವೂ ಸರ್ವನಾಶವಾಗುತ್ತದೆ. ಇವರಿಗಾಗಿಯೆ ಹಗಲಿರುಳು ದುಡಿಯುತ್ತಿರುವ ಅಮಿತ್ ಶಾ, ನರೇಂದ್ರ ಮೋದಿ ಮುಂತಾದವರೆಲ್ಲರು ಥರ ಥರದ ಸುಳ್ಳುಗಳನ್ನು ಸಿದ್ಧಪಡಿಸಿಕೊಂಡು ಕನ್ನಡಿಗರ ತಲೆಗೆ ತುಂಬುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನಮ್ಮನ್ನು ದೋಚಲು ಬಿಜೆಪಿಯವರು ಸಿದ್ಧಪಡಿಸಿಕೊಂಡಿರುವ ಸುಳ್ಳಿನ ಸರಮಾಲೆಯಲ್ಲಿ ಹಿಂದೂ-ಮುಸ್ಲಿಂ ದ್ವೇಷ, ಭ್ರಷ್ಟಾಚಾರ, ಕುಟುಂಬ ರಾಜಕಾರಣ ಎಂಬ ಕಡ್ಡಾಯವಾದ ಮೂರು ಅಂಶಗಳು ಇರುತ್ತವೆ. ಹಾಗಾಗಿ ಜನರು ಎಚ್ಚರ ವಹಿಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT