ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸ್ತಿಪಟುಗಳ ಮೇಲೆ ಹಲ್ಲೆ ಆರೋಪ; ಪ್ರಧಾನಿ ವಿರುದ್ಧ ಕಿಡಿಕಾರಿದ ಸ್ಟಾಲಿನ್‌

Published 4 ಮೇ 2023, 9:53 IST
Last Updated 4 ಮೇ 2023, 9:53 IST
ಅಕ್ಷರ ಗಾತ್ರ

ಚೆನೈ : ಪ್ರತಿಭಟನಾನಿರತ ಕುಸ್ತಿಪಟುಗಳು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯ ಬಗ್ಗೆ ಟ್ವೀಟ್ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಬಿಜೆಪಿಯವರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಬುಧವಾರ ರಾತ್ರಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಮತ್ತು ಕೆಲವು ಪೊಲೀಸ್‌ ಸಿಬ್ಬಂದಿಯ ನಡುವೆ ಘರ್ಷಣೆಯಾಗಿತ್ತು. ಪೊಲೀಸರು ಕುಡಿದು ಬಂದು ನಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಕುಸ್ತಿಪಟುಗಳು ಆರೋಪ ಮಾಡಿದ್ದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಸ್ಟಾಲಿನ್‌, ‘ಮಾನ್ಯ ಪ್ರಧಾನಮಂತ್ರಿಗಳು ಮಹಿಳಾ ಸಬಲೀಕರಣದ ಬಗ್ಗೆ ಭಾಷಣ ಮಾಡುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ ಸಂತ್ರಸ್ತರಿಗೆ ಚಿತ್ರಹಿಂಸೆ, ಅಪರಾಧಿಗಳ ರಕ್ಷಣೆ ನಡೆಯುತ್ತಿದೆ. ಕಥುವಾ, ಉನ್ನಾವೊ, ಹಾಥರಸ್‌, ಬಿಲ್ಕಿಸ್‌ ಬಾನು ಮುಂತಾದ ಪ್ರಕರಣಗಳು ಇದಕ್ಕೆ ಸಾಕ್ಷಿಯಾಗಿವೆ‘ ಎಂದು ಹೇಳಿದರು.

‘ನಮ್ಮ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟುಗಳಿಗೆ ತೀವ್ರ ಅನ್ಯಾಯವಾಗುತ್ತಿದೆ. ಇದು ಇಲ್ಲಿಗೆ ಮುಗಿದಿಲ್ಲ‘ ಎಂದು ಹೇಳಿದ ಅವರು, ‘ಕುಸ್ತಿಪಟುಗಳ ನ್ಯಾಯಕ್ಕಾಗಿ ನಾನು ಒತ್ತಾಯಿಸುತ್ತೇನೆ‘ ಎಂದು ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಸಂಸದ, ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು, ಬ್ರಿಜ್‌ ಭೂಷಣ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಏಪ್ರಿಲ್‌ 23ರಿಂದ ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT