ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಆಧಾರ ಮೇಲೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೆ.1 ರವರೆಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ವಿಸ್ತರಿಸಿದೆ.
ಸತ್ಯೇಂದ್ರ ಜೈನ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಸತ್ಯೇಂದ್ರ ಅವರು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರಿಗೆ ಕೆಲವು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ಎಂ.ಎಂ. ಸುಂದ್ರೇಶ್ ಅವರಿದ್ದ ನ್ಯಾಯಪೀಠ ಮಧ್ಯಂತರ ಜಾಮೀನು ಅವಧಿಯನ್ನು ಸೆ.1 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತು. ಸೆ.1ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿತು.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರು ಬಂಧನಕ್ಕೆ ಒಳಗಾಗಿದ್ದರು. ಚಿಕಿತ್ಸೆ ಪಡೆದುಕೊಳ್ಳುವುದಕ್ಕಾಗಿ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.