ನವದೆಹಲಿ: ಕೇಂದ್ರ ಸರ್ಕಾರವು ಮರುಪರಿಶೀಲನೆ ಪೂರ್ಣಗೊಳಿಸುವ ವರೆಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸದೇ ಇರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚನೆ ನೀಡಿದೆ.
ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ.
ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಈಗಾಗಲೇ ದೇಶದ್ರೋಹ ಪ್ರಕರಣದಲ್ಲಿ ಜೈಲುಗಳಲ್ಲಿ ಇರುವವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದೂ ಪೀಠ ಹೇಳಿದೆ. ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಜುಲೈಗೆ ಮುಂದೂಡಿಕೆ ಮಾಡಿದೆ.
ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಅಮಾನತಿನಲ್ಲಿ ಇರಿಸುವುದು ಸಾಧ್ಯವೇ ಎಂಬುದನ್ನು 24 ತಾಸುಗಳೊಳಗೆ ತಿಳಿಸಬೇಕು ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿತ್ತು. ಈ ಕಾಯ್ದೆಯ ಅಡಿಯಲ್ಲಿ ದಾಖಲಾಗಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಗತಿ ಏನು ಎಂದೂ ಕೋರ್ಟ್ ಪ್ರಶ್ನಿಸಿತ್ತು.