ಹೈದರಾಬಾದ್(ತೆಲಂಗಾಣ): ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ತಂಡವು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ಶುಕ್ರವಾರ ಭೇಟಿ ಮಾಡಿತು.
ಪ್ರವಾಹ ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ಇಲ್ಲಿನ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿಯಾಗಿದೆ. ಕೇಂದ್ರ ತಂಡಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ತಕ್ಷಣ ಪ್ರವಾಹ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಭವಿಷ್ಯದಲ್ಲಿ ಪ್ರವಾಹದಿಂದ ಉಂಟಾಗುವ ಹಾನಿ ತಡೆಗಟ್ಟಲು ಶಾಶ್ವತ ಕ್ರಮಗಳನ್ನು ತೆಗೆದುಕೊಳ್ಳಲು ನಿಧಿಯನ್ನು ಸ್ಥಾಪಿಸಲು ಒಲವು ತೋರಿದ ಸಿಎಂ, ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕೇಂದ್ರ ಸರ್ಕಾರವು ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಮಳೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಮೂರು ದಿನಗಳಿಂದ ಭೇಟಿ ನೀಡಿದೆ. ತಂಡವು ಸೆಪ್ಟೆಂಬರ್ 11 ರಂದು ರಾಜ್ಯ ಮುಖ್ಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿತ್ತು.
ರಾಜ್ಯ ಸರ್ಕಾರದ ಪ್ರಾಥಮಿಕ ಅಂದಾಜಿನ ಪ್ರಕಾರ ಪ್ರವಾಹದಿಂದ ₹ 5,438 ಕೋಟಿ ನಷ್ಟ ಉಂಟಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ 29 ಜನ ಸಾವಿಗೀಡಾಗಿದ್ದಾರೆ.