ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Elections 2024: ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿ: ಖರ್ಗೆ

Published 10 ಜನವರಿ 2024, 15:08 IST
Last Updated 10 ಜನವರಿ 2024, 15:08 IST
ಅಕ್ಷರ ಗಾತ್ರ

ನವದೆಹಲಿ: ಸುಳ್ಳು ಸಂಕಥನಗಳನ್ನು ಸೋಲಿಸಲು ಕಾಂಗ್ರೆಸ್ಸಿನ ಮುಂಚೂಣಿ ಸಂಘಟನೆಗಳು ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿ ಇರಬೇಕು ಎಂದು ಕರೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ‘10 ವರ್ಷಗಳ ವೈಫಲ್ಯ’ಗಳ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳು ರಾಜಕಾರಣದ ಮೇಲೆ ಪ್ರಭಾವ ಬೀರುತ್ತಿರುವ ಸಂದರ್ಭದಲ್ಲಿ ತಮ್ಮ ಯುವ ಸಹೋದ್ಯೋಗಿಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಸತ್ಯವನ್ನು ಆಧರಿಸಿ ಸಭ್ಯತೆಯಿಂದ ಪ್ರತಿಕ್ರಿಯೆಗಳನ್ನು ನೀಡಬೇಕು ಎಂದು ಖರ್ಗೆ ಕಿವಿಮಾತು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ತಯಾರಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆಯ ಸಿದ್ಧತೆಗೆ ಸಂಬಂಧಿಸಿದಂತೆ ಖರ್ಗೆ ಅವರು ಪಕ್ಷದ ವಿವಿಧ ಸಂಘಟನೆಗಳ ಮುಖಂಡರನ್ನು, ವಿವಿಧ ವಿಭಾಗಗಳ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ರಾಜಕೀಯ ವಾತಾವರಣವು ಭಿನ್ನವಾಗಿದೆ, ‘ಇಂಡಿಯಾ’ ಮೈತ್ರಿಕೂಟದಲ್ಲಿನ ಒಗ್ಗಟ್ಟಿನ ಕಾರಣದಿಂದಾಗಿ ಎನ್‌ಡಿಎ ಮೈತ್ರಿಕೂಟದಲ್ಲಿ ತಳಮಳ ಉಂಟಾಗಿದೆ ಎಂದು ಖರ್ಗೆ ಹೇಳಿದ್ದಾರೆ. ‘ಕಳೆದ ಕೆಲವು ತಿಂಗಳುಗಳಲ್ಲಿ ನಾವು ಶ್ರಮವಹಿಸಿ ಕೆಲಸ ಮಾಡಿದ್ದೇವೆ. ಪರಿಸ್ಥಿತಿ ಪೂರಕವಾಗಿ ಇಲ್ಲದಿದ್ದಾಗಲೂ ವಿಧಾನಸಭಾ ಚುನಾವಣೆಗಳಲ್ಲಿ ನಾವು ಬಿಜೆಪಿ ಪಡೆದಿದ್ದಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದೇವೆ. ಆದರೆ ನಿರೀಕ್ಷೆಯಷ್ಟು ಸ್ಥಾನಗಳು ನಮಗೆ ಬಂದಿಲ್ಲ...’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಲು ಬಳಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ವೈಫಲ್ಯಗಳು ಜನರಿಗೆ ಗೊತ್ತಾಗಬೇಕು. ಅವುಗಳನ್ನು ಜನರ ಮುಂದೆ ಇರಿಸಬೇಕು. ಶ್ರೀಮಂತರು ಹಾಗೂ ಬಡವರ ನಡುವಿನ ಅಂತರ ಹೆಚ್ಚಾಗುತ್ತಿರುವುದು, 45 ವರ್ಷಗಳ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣಕ್ಕೆ ಸಂಬಂಧಿಸಿದ ಪ್ರಶ್ನೆಗಳು ತೆರೆಮರೆಯಲ್ಲೇ ಉಳಿದುಬಿಡಬಾರದು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT