ನಾಗ್ಪುರ: ‘ಮಹಾರಾಷ್ಟ್ರದ ಪೆಂಚ್ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ನಡೆಸಿದ ದಾಳಿಯಲ್ಲಿ 65 ವರ್ಷದ ಮಹಿಳೆ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ನಿತಾ ಕುಂಭಾರೆ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಹುಲಿ ದಾಳಿ ನಡೆದಿದೆ ಎಂದು ಪೆಂಚ್ ಮೀಸಲು ಅರಣ್ಯದ ಉಪನಿರ್ದೇಶಕ ಪ್ರಭುನಾಥ್ ಶುಕ್ಲಾ ಹೇಳಿದ್ದಾರೆ.
ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತೀವ್ರವಾಗಿ ಆಕ್ರೋಶಗೊಂಡ ಜಿಂಝಿರ್ಯಾ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಅರಣ್ಯ ಇಲಾಖೆಯ ಕೆಲ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಿರಿಯ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಹುಲಿಯನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.
ಮೃತ ಮಹಿಳೆಯ ಕುಟುಂಬದವರಿಗೆ ತಕ್ಷಣ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಶುಕ್ಲಾ ತಿಳಿಸಿದ್ದಾರೆ.