ಕೋಲ್ಕತ್ತ: ಮಹತ್ವದ ಬೆಳವಣಿಗೆಯೊಂದರಲ್ಲಿ ಇತ್ತೀಚೆಗೆ ಬಿಜೆಪಿ ಸೇರಿದ್ದ ಇಬ್ಬರು ಟಿಎಂಸಿ ಶಾಸಕರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.
ಬೋಂಗಾವ್ ಶಾಸಕ ಬಿಸ್ವಜಿತ್ ದಾಸ್ ಮತ್ತು ನೋಪಾರಾ ಶಾಸಕ ಸುನಿಲ್ ಸಿಂಗ್ ಅವರು ಮಮತಾ ಬ್ಯಾನರ್ಜಿ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ತಮ್ಮ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದಾಗಿ ಉಭಯ ಶಾಸಕರು ಹೇಳಿಕೊಂಡಿದ್ದಾರೆ. ಆದರೆ ಅವರು ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಟಿಎಂಸಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಬಿಜೆಪಿ ಸೇರಿರುವ ಟಿಎಂಸಿ ಶಾಸಕರು ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿರಬಹುದು. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.