ನವದೆಹಲಿ: ವಿರೋಧ ಪಕ್ಷಗಳ ನಾಯಕರನ್ನು ಮುಗಿಸಲು ಬಿಜೆಪಿ ಯತ್ನಿಸುತ್ತಿದ್ದು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ' ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಶುಕ್ರವಾರ ಆರೋಪಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದರು.
ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಪಠಾಕ್, 'ಇದು 'ಮೋಸ'ದ ಕೃತ್ಯ. ನ್ಯಾಯಾಂಗದಲ್ಲಿ ನಮಗೆ ಸಂಪೂರ್ಣ ನಂಬಿಕೆಯಿದೆ. ನ್ಯಾಯ ಸಿಗಲು ವಿಳಂಬವಾಗಬಹುದು. ಆದರೆ ಅಂತಿಮವಾಗಿ ಸತ್ಯ ಗೆಲ್ಲಲಿದೆ' ಎಂದು ಹೇಳಿದ್ದಾರೆ.
'ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ವಿರೋಧ ಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸುವ ಮೂಲಕ ರಾಜಕೀಯ ಎದುರಾಳಿಗಳನ್ನು ಮುಗಿಸಲು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ. ಬಿಜೆಪಿಗೆ ಸೇರಲು ಬೆದರಿಕೆ ಹಾಕಲಾಗುತ್ತಿದೆ. ಬಿಜೆಪಿಗೆ ಸೇರಿದವರಿಗೆ ಕ್ಲೀನ್ ಚಿಟ್ ನೀಡಲಾಗುತ್ತಿದೆ. ಆದರೆ ಸರ್ವಾಧಿಕಾರವನ್ನು ವಿರೋಧಿಸುವವರನ್ನು ಬಂಧಿಸಲಾಗುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
'ಕೇಜ್ರಿವಾಲ್ ಸಾಮಾನ್ಯ ನಾಯಕನಲ್ಲ ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು. ಇಮ್ಮಡಿ ಶಕ್ತಿಯೊಂದಿಗೆ ಅವರು ಮರಳಲಿದ್ದಾರೆ' ಎಂದು ಅವರು ಎಚ್ಚರಿಸಿದ್ದಾರೆ.
ಕೇಜ್ರಿವಾಲ್ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಎಎಪಿಯ ಹಲವು ನಾಯಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಮಗದೊಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಮುಖಂಡ ದಿಲೀಪ್ ಪಾಂಡೆ, 'ಕೇಜ್ರಿವಾಲ್ ಅವರ ಬಂಧನವು ಬಿಜೆಪಿ ಮಾಡಿದ ಅತಿ ದೊಡ್ಡ ರಾಜಕೀಯ ತಪ್ಪು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.