ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನೆ ನಿಯೋಜನೆ ಬಳಿಕ ಸಹಜ ಸ್ಥಿತಿಗೆ ಉತ್ತರಾಖಂಡ ಹಲ್ದ್ವಾನಿ

ಹಿಂಸಾಚಾರ ಪೀಡಿತ ಬನ್‌ಭೂಲ್‌ಪುರ ಪ್ರದೇಶದಲ್ಲಿ ಕಟ್ಟೆಚ್ಚರ
Published 12 ಫೆಬ್ರುವರಿ 2024, 13:05 IST
Last Updated 12 ಫೆಬ್ರುವರಿ 2024, 13:05 IST
ಅಕ್ಷರ ಗಾತ್ರ

ಹಲ್ದ್ವಾನಿ (ಉತ್ತರಾಖಂಡ): ಹಿಂಸಾಚಾರ ಪೀಡಿತ ಬನ್‌ಭೂಲ್‌ಪುರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದ್ದು, ಸೋಮವಾರ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕರ್ಫ್ಯೂ ಪೀಡಿತ ಪ್ರದೇಶದ ನಿವಾಸಿಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು’ ಎಂದು ನೈನಿತಾಲ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್‌ ಮೀನಾ ಹೇಳಿದ್ದಾರೆ.

‘ಕಾನೂನು ಸುವ್ಯವಸ್ಥೆ ಕಾಪಾಡಲು ಬನ್‌ಭೂಲ್‌ಪುರದ ಸೂಕ್ಷ್ಮ ಪ್ರದೇಶದಲ್ಲಿ ಅರೆಸೇನಾ ಪಡೆಯ ಒಂದು ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಫೆ. 8ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಹಲ್ದ್ವಾನಿ ಸಹಜ ಸ್ಥಿತಿಗೆ ಮರಳಿದೆ. ಬನ್‌ಭೂಲ್‌ಪುರದಲ್ಲಿ 120 ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ’ ಎಂದು ನೈನಿತಾಲ್‌ ಜಿಲ್ಲಾಧಿಕಾರಿ ವಂದನಾ ಸಿಂಗ್ ಹೇಳಿದ್ದಾರೆ.

‘ಬನ್‌ಭೂಲ್‌ಪುರ ಹೊರತುಪಡಿಸಿ ಹಲ್ದ್ವಾನಿಯ ಉಳಿದ ಪ್ರದೇಶಗಳಲ್ಲಿ ಭಾನುವಾರ ಕರ್ಫ್ಯೂ ಹಿಂಪಡೆಯಲಾಗಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಔಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಮನೆಗಳಿಗೆ ಗ್ಯಾಸ್‌ ಸಿಲಿಂಡರ್‌ ಪೂರೈಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳನ್ನು ಮಾರಾಟಗಾರರ ಮೂಲಕ ಸ್ಥಳೀಯ ನಿವಾಸಿಗಳಿಗೆ ತಲುಪಿಸಲಾಗುತ್ತಿದೆ’ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮವಾಗಿ ನಿರ್ಮಾಣಗೊಂಡಿದ್ದ ಮದರಸಾ ಹಾಗೂ ನಮಾಜ್‌ ಮಾಡುವ ಸ್ಥಳವನ್ನು ಫೆ. 8ರಂದು ನೆಲಸಮಗೊಳಿಸುವಾಗ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳನ್ನು ಬಂಧಿಸಲು ವಿವಿಧೆಡೆ ದಾಳಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT