ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video |ಗುಜರಾತ್‌ನಲ್ಲಿ ಭಾರಿ ಮಳೆ: ಧರೆಗುರುಳಿದ ಕಂಬಗಳು, ಸಾವಿರಾರು ಕಾರುಗಳು ಜಖಂ

Published 23 ಜುಲೈ 2023, 13:14 IST
Last Updated 23 ಜುಲೈ 2023, 13:14 IST
ಅಕ್ಷರ ಗಾತ್ರ

ಅಹಮದಾಬಾದ್‌: ಭಾರಿ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಗುಜರಾತ್‌ನ ಜುನಾಗಢದಲ್ಲಿ ಭಾನುವಾರ ನೆರೆ ನೀರು ಕಡಿಮೆಯಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಪ್ರವಾಹದಿಂದಾಗಿ ಸಾವಿರಾರು ಕಾರುಗಳು ಜಖಂಗೊಂಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ಪ್ರವಾಹದ ರಭಸಕ್ಕೆ ನೂರಾರು ದನಕರುಗಳು, ಕಾರುಗಳು ಕೊಚ್ಚಿ ಹೋಗುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗುತ್ತಿರುವ ದನಗಳು
ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗುತ್ತಿರುವ ದನಗಳು

ಜುನಾಗಢದ ಪ್ರವಾಹಪೀಡಿತ ಪ್ರದೇಶದಿಂದ ಮೂರು ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಮಳೆ ಕಡಿಮೆಯಾದ ಕಾರಣ ನಗರದಲ್ಲಿ ವಿದ್ಯುತ್ ಸಂಪರ್ಕ ಪುನರ್‌ಸ್ಥಾಪಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅಗ್ನಿ ಶಾಮಕ ದಳದವರು ರಕ್ಷಣಾ ಕಾರ್ಯಾಚರಣೆ ನಡೆಸಿ ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ’ ಎಂದು ಜುನಾಗಢದ ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಜುಲೈ 24ರಂದು ಗುಜರಾತ್‌ನ ವಿವಿಧೆಡೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ‘ಆರೆಂಜ್‌’ ಅಲರ್ಟ್‌ ಘೋಷಿಸಲಾಗಿದೆ. ಭಾನುವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜುನಾಗಢದಲ್ಲಿ 241 ಮಿ.ಮೀ. ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ರಾಜ್ಯದಾದ್ಯಂತ ಶನಿವಾರ ಬಾರಿ ಮಳೆ ಸುರಿದ ಪರಿಣಾಮ ಎರಡು ರಾಷ್ಟ್ರೀಯ ಹೆದ್ದಾರಿ, 10 ರಾಜ್ಯ ಹೆದ್ದಾರಿ ಮತ್ತು ಗ್ರಾಮೀಣ ಪ್ರದೇಶದ 300 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಗುಜರಾತ್‌ ಸಿ.ಎಂ ಜೊತೆ ಶಾ ಮಾತುಕತೆ: ‘ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಜೊತೆಗೆ ಮಾತನಾಡಿದ್ದೇನೆ. ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಜೊತೆಗೂ ಮಾತನಾಡಿ ಯಮುನಾ ನದಿಯ ನೀರಿನ ಮಟ್ಟದ ಕುರಿತು ಮಾಹಿತಿ ಪಡೆದಿದ್ದೇನೆ’ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT