ಗುಜರಾತ್‌ನಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸಂಬಂಧಿತ ಅವಘಡಗಳಿಂದಾಗಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ ಸುಮಾರು 17,800 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್), ಸೇನೆ, ಕರಾವಳಿ ಕಾವಲು ಪಡೆಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಸೌರಾಷ್ಟ್ರ ಭಾಗದ ದೇವ್‌ಭೂಮಿ ದ್ವಾರಕಾ, ಜಾಮ್‌ನಗರ, ರಾಜ್‌ಕೋಟ್ ಮತ್ತು ಪೋರಬಂದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಗುರುವಾರವೂ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.