ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಯನಾಡು ಭೂಕುಸಿತ | ಐದನೇ ದಿನವೂ ಮುಂದುವರಿದ ರಕ್ಷಣಾ ಕಾರ್ಯಾಚರಣೆ

Published 3 ಆಗಸ್ಟ್ 2024, 6:55 IST
Last Updated 3 ಆಗಸ್ಟ್ 2024, 6:55 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತದಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬದುಕುಳಿದವರನ್ನು ರಕ್ಷಿಸುವ ಸಲುವಾಗಿ 1300ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಉಪಕರಣಗಳು, ಭಾರಿ ಗಾತ್ರದ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲೆಂದು ಪತ್ತೆ ಹಚ್ಚುವ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸ್ವಯಂ ಸೇವಕರು, ಪೊಲೀಸರು ಸೇರಿದಂತೆ ರಕ್ಷಣಾ ಪಡೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕುಸಿತ ಸಂಭವಿಸಿದ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಬೃಹತ್ ಗಾತ್ರದ ಬಂಡೆಗಳು, ಮರದ ದಿಮ್ಮಿಗಳು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ. ಮಣ್ಣಿನಡಿ ಹೂತು ಹೋಗಿರುವ ಜನರನ್ನು ಪತ್ತೆ ಹಚ್ಚಲು ರಕ್ಷಣಾ ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ ಎಂದು ತಿಳಿದು ಬಂದಿದೆ.

ಜುಲೈ 30ರ ಮುಂಜಾನೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, 273 ಜನರು ಗಾಯಗೊಂಡಿದ್ದಾರೆ. ಸುಮಾರು 300ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.

‘ಭೂಕುಸಿತ ಪೀಡಿತ ಪ್ರದೇಶಗಳನ್ನು ವಲಯಗಳಾಗಿ ವಿಂಗಡಿಸಿದೆ. ರಕ್ಷಣಾ ಕಾರ್ಯ ಮುಂದುವರಿಸಲು ಸಂಭಾವ್ಯ ಸ್ಥಳಗಳನ್ನು ಮ್ಯಾಪ್ ಮಾಡಲಾಗಿದೆ, ವೈಮಾನಿಕ ಛಾಯಾಚಿತ್ರಗಳು ಹಾಗೂ ಸೆಲ್‌ ಫೋನ್‌ಗಳ ಸ್ಥಳ ಡೇಟಾವನ್ನು ಸಂಗ್ರಹಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಗಾಯಗೊಂಡವರನ್ನು ಹಾಗೂ ಅಸ್ವಸ್ಥರಾದವರನ್ನು ತಕ್ಷಣವೇ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವೈದ್ಯರು, ಆಂಬ್ಯುಲೆನ್ಸ್‌ಗಳು, ಸಶಸ್ತ್ರ ಪಡೆಗಳು ಸ್ಥಳದಲ್ಲಿಯೇ ಬೀಡುಬಿಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT