ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Wayanad Landslides | ₹2,000 ಕೋಟಿ ಪರಿಹಾರ ಒದಗಿಸಲು ಕೇಂದ್ರಕ್ಕೆ ವಿಜಯನ್ ಮನವಿ

Published : 1 ಸೆಪ್ಟೆಂಬರ್ 2024, 10:13 IST
Last Updated : 1 ಸೆಪ್ಟೆಂಬರ್ 2024, 10:13 IST
ಫಾಲೋ ಮಾಡಿ
Comments

ತಿರುವನಂತಪುರ: ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಆಸ್ತಿ–ಪಾಸ್ತಿ ನಷ್ಟವಾಗಿದೆ. ಸಂತ್ರಸ್ತರಿಗೆ ಪುನರ್‌ ವಸತಿ ಕಲ್ಪಿಸುವ ಸಲುವಾಗಿ ₹2,000 ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ವಯನಾಡ್ ಭೂಕುಸಿತದ ಕುರಿತು ‘ಪಿಟಿಐ’ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಮಾಧವ ಗಾಡ್ಗೀಳ್‌ ಮತ್ತು ಕಸ್ತೂರಿರಂಗನ್ ಸಮಿತಿಗಳು ಮಾಡಿರುವ ಶಿಫಾರಸುಗಳು ಅವೈಜ್ಞಾನಿಕ. ಈ ಸಮಿತಿಗಳು ವಾಸ್ತವಾಂಶಗಳನ್ನು ಪರಿಗಣಿಸಲಿಲ್ಲ’ ಎಂದು ತಿಳಿಸಿದ್ದಾರೆ.

‘ಭೂಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸುರಕ್ಷಿತ ಸ್ಥಳವನ್ನು ಒದಗಿಸುವ ಮೂಲಕ ಒಂದು ವರ್ಷದೊಳಗೆ ಸುಸಜ್ಜಿತ ಟೌನ್‌ಶಿಪ್‌ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ₹2,000 ಕೋಟಿ ವಿಪತ್ತು ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ’ ಎಂದು ವಿಜಯನ್ ಹೇಳಿದ್ದಾರೆ.

ನಮ್ಮ ಮನವಿಗೆ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ವಯನಾಡ್ ಭೂಕುಸಿತ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದರೆ ಎಲ್ಲಾ ಸಂಸದರು ಕೇರಳ ಪರಿಹಾರ ನಿಧಿಗೆ ತಲಾ ₹1 ಕೋಟಿ ದೇಣಿಗೆ ನೀಡಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಸ್ಥಳೀಯ ಸಂಸದರು ಮಾತ್ರ ದೇಣಿಗೆ ನೀಡಲು ಸಾಧ್ಯವಾಗುತ್ತದೆ ಎಂದು ವಿಜಯನ್ ಹೇಳಿದರು.

ಭೂಕುಸಿತ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದರೆ ರಾಜ್ಯಕ್ಕೆ ಉತ್ತಮ ನೆರವು ಸಿಗುತ್ತದೆ. ಇದು ಪುನರ್ನಿರ್ಮಾಣಕ್ಕೆ ಹೆಚ್ಚು ಅನುಕೂಲವಾಗುತ್ತದೆ ಎಂದಿದ್ದಾರೆ.

ಜುಲೈ 30ರಂದು ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 210 ಜನರು ಮೃತಪಟ್ಟಿದ್ದಾರೆ, 273 ಜನರು ಗಾಯಗೊಂಡಿದ್ದಾರೆ. ಸುಮಾರು 300 ಜನರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT