ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಗಾಳದಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲು: ಭುಗಿಲೆದ್ದ ಆಕ್ರೋಶ

Published 1 ಸೆಪ್ಟೆಂಬರ್ 2024, 12:30 IST
Last Updated 1 ಸೆಪ್ಟೆಂಬರ್ 2024, 12:30 IST
ಅಕ್ಷರ ಗಾತ್ರ

ಕೋಲ್ಕತ್ತ: ನಗರದ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಘಟನೆ ಸಂಬಂಧ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಇಂದು (ಭಾನುವಾರ) ರಾಜ್ಯದಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಈ ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಉದ್ರಿಕ್ತರು ಆರೋಪಿಯ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಜತೆಗೆ, ಆರೋಪಿಯ ಸಂಬಂಧಿಯೊಬ್ಬರ ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ಹಿಂಸಾತ್ಮಕ ಘಟನೆಗಳು ವರದಿಯಾಗಿವೆ.

ಹೌರಾದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 13 ವರ್ಷದ ಬಾಲಕಿಗೆ ಲ್ಯಾಬ್ ಟೆಕ್ನಿಷಿಯನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ನ್ಯುಮೋನಿಯಾ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಿಟಿ ಸ್ಕ್ಯಾನ್ ಮಾಡಿಸಿಕೊಳ್ಳಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಘಟನೆ ಬೆನ್ನಲ್ಲೇ ಆರೋಪಿ ಅಮನ್ ರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸಂತ್ರಸ್ತೆಯ ಕುಟುಂಬಸ್ಥರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮತ್ತೊಂದೆಡೆ ಬಿರ್‌ಭುಮ್‌ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ರೋಗಿಯೊಬ್ಬರು ಕರ್ತವ್ಯ ನಿರತ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT