ಬೆಂಗಳೂರು: ರಾಜ್ಯದ 195 ಬರಪೀಡಿತ ತಾಲ್ಲೂಕುಗಳಲ್ಲಿ ಮಳೆ ಕೊರತೆಯಿಂದ 42 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬರ ಪರಿಹಾರಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್) ನೆರವು ಕೋರಲು ಮನವಿಪತ್ರ ಸಿದ್ಧಪಡಿಸುವ ಸಂಬಂಧ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
40 ಲಕ್ಷ ಹೆಕ್ಟೇರ್ ವಿಸ್ತರ್ಣದಲ್ಲಿ ಕೃಷಿ ಬೆಳೆಗಳಿಗೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ, ಕೃಷಿ ಬೆಳೆಗಳ ಹಾನಿಗೆ ₹ 4,000 ಕೋಟಿ, ತೋಟಗಾರಿಕಾ ಬೆಳೆಗಳ ಹಾನಿಗೆ ₹ 200 ಕೋಟಿ ಪರಿಹಾರ ಕೋರಲು ಅವಕಾಶವಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಸೇರಿದಂತೆ ಒಟ್ಟು ₹ 6,000 ಕೋಟಿವರೆಗೂ ನೆರವು ಕೋರಬಹುದು ಎಂದರು.
ಎಲ್ಲ ತಾಲ್ಲೂಕುಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮನವಿ ಸಿದ್ಧಪಡಿಸುವ ಕೆಲಸ ಶೇಕಡ 70ರಷ್ಟು ಪೂರ್ಣಗೊಂಡಿದೆ. ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅಭಿಪ್ರಾಯ ಪಡೆಯಲಾಗುವುದು. ನಂತರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
13 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. 131 ಜನವಸತಿಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಕೆಗೆ ಬಳಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಗಳಲ್ಲಿ ₹ 462 ಕೋಟಿ ಲಭ್ಯವಿದೆ ಎಂದು ವಿವರ ನೀಡಿದರು.
ಕೇರಳ, ಬಿಹಾರ, ಮಿಜೋರಾಂ, ಪಶ್ಚಿಮ ಬಂಗಾಳ, ಮಣಿಪುರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಬರ ಪರಿಸ್ಥಿತಿ ಇದೆ. ಕರ್ನಾಟಕ ಮಾತ್ರ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಪ್ರಕಟಿಸಿದೆ ಎಂದರು.
161 ತಾಲ್ಲೂಕುಗಳಲ್ಲಿ ತೀವ್ರ ಬರ, 34 ತಾಲ್ಲೂಕುಗಳಲ್ಲಿ ಸಾಧಾರಣ ಬರ ಪರಿಸ್ಥಿತಿ ಇದೆ ಎಂದು ಘೋಷಿಸಲಾಗಿದೆ. ಉಳಿದ 41 ತಾಲ್ಲೂಕುಗಳ ಪರಿಸ್ಥಿತಿಯೂ ಅದೇ ರೀತಿ ಇದೆ. ಈ ಪೈಕಿ 15 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವಂತೆ ಶಾಸಕರು ಒತ್ತಡ ಹೇರುತ್ತಿದ್ದಾರೆ. ತಿಂಗಳಾಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.