ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

58 ಪಿ.ಯು ಕಾಲೇಜುಗಳಿಗೆ ಬೀಗ?

Last Updated 10 ಜುಲೈ 2018, 19:43 IST
ಅಕ್ಷರ ಗಾತ್ರ

ಬೆಂಗಳೂರು: 28,847 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರ, ಇದೀಗ 58 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಬೀಗ ಹಾಕುವತ್ತ ಹೆಜ್ಜೆ ಇಟ್ಟಿದೆ.

ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಎಸ್‌.ಟಿ. ಸೋಮಶೇಖರ್‌ ಅವರ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌, ‘ಈ ಕಾಲೇಜುಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇರುವ ಕೆಲವು ಮಾನದಂಡಗಳ ಆಧಾರದಲ್ಲಿ ಕಾಲೇಜುಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ’ ಎಂದರು.

‘ಕಳೆದ ಎರಡು ವರ್ಷಗಳಲ್ಲಿ 19 ಪದವಿಪೂರ್ವ ಕಾಲೇಜುಗಳನ್ನು ಸ್ಥಳಾಂತರ ಮಾಡಲಾಗಿತ್ತು’ ಎಂದು ಅವರು ಹೇಳಿದರು.

‘ಅನೇಕ ಕಾಲೇಜುಗಳಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ದಾಖಲಾಗಿಲ್ಲ. ಕೆಲವು ಕಾಲೇಜುಗಳಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ, ಅಲ್ಲಿ ಬೇಕಾದಷ್ಟು ಶಿಕ್ಷಕರು ಇಲ್ಲ. ಸ್ಥಳಾಂತರ ಮಾಡುವುದರಿಂದ ಸ್ವಲ್ಪ ಮಟ್ಟಿಗೆ ಈ ಸಮಸ್ಯೆ ಬಗೆಹರಿಸಬಹುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಸದ್ಯ 58 ಕಾಲೇಜುಗಳನ್ನು ಗುರುತಿಸಿದ್ದೇವೆ. ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆದು ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ಈಗಲೂ ನಡೆಯುತ್ತಿದೆ. ಈ ತಿಂಗಳ ಅಂತ್ಯಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಕಾಲೇಜುಗಳ ಸಂಖ್ಯೆಯಲ್ಲಿ ಹೆಚ್ಚು–ಕಡಿಮೆ ಆಗಬಹುದು. ಬಳಿಕ ಸ್ಥಳಾಂತರದ ಪ್ರಸ್ತಾವನೆ ಸಲ್ಲಿಸುತ್ತೇವೆ’ ಎಂದು ಅವರು ಹೇಳಿದರು.

‘ಇದೊಂದು ಮಾಮೂಲಿ ಪ್ರಕ್ರಿಯೆ. ಪ್ರತಿವರ್ಷ ಇದನ್ನು ನಡೆಸುತ್ತೇವೆ’ ಎಂದು ಸಮಜಾಯಿಷಿಯನ್ನೂ ನೀಡಿದರು.

‘1 ಕಿ.ಮೀ ವ್ಯಾಪ್ತಿಯಲ್ಲಿರುವ ಮತ್ತು ಕಡಿಮೆ ದಾಖಲಾತಿ ಹೊಂದಿರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಸಮೀಪದ 8,530 ಶಾಲೆಗಳೊಂದಿಗೆ ವಿಲೀನಗೊಳಿಸಲಾಗುವುದು. ಇದೇ ಅವಧಿಯಲ್ಲಿ 1000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ತರಗತಿಗಳನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ನಲ್ಲಿ ತಿಳಿಸಿದ್ದರು.ಇದರ ಬೆನ್ನಲ್ಲೇ, ವಿದ್ಯಾರ್ಥಿಗಳಿಲ್ಲ ಎಂಬ ನೆಪ ಒಡ್ಡಿ ಪದವಿಪೂರ್ವ ಕಾಲೇಜುಗಳಿಗೆ ಬೀಗ ಹಾಕಲು ಇಲಾಖೆ ಮುಂದಾಗಿದೆ.

ಬಿಜೆಪಿಯ ಎಂ‍.ಪಿ.ರೇಣುಕಾಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ‘ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತೀಕರಿಸಿ, 19 ಸರ್ಕಾರಿ ಪಿಯು ಕಾಲೇಜುಗಳನ್ನು ಹಾಗೂ ಹೊಸದಾಗಿ 7 ಸರ್ಕಾರಿ ಪದವಿಪೂರ್ವ ಕಾಲೇಜುಗಳನ್ನು ಮಂಜೂರು ಮಾಡಲಾಗಿತ್ತು’ ಎಂದಿದ್ದಾರೆ. ಶೂನ್ಯ ದಾಖಲಾತಿ/ ಕಡಿಮೆ ದಾಖಲಾತಿ ಹೊಂದಿರುವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅಗತ್ಯವಿರುವ ಕಾಲೇಜುಗಳಿಗೆ ಸ್ಥಳಾಂತರಿಸುವ ಮೂಲಕ ಕೆಲವು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ’ ಎಂದಿದ್ದಾರೆ.

ಮುಖ್ಯಾಂಶಗಳು

* ಮಾನದಂಡ ಆಧರಿಸಿ ಕಾಲೇಜುಗಳ ಸ್ಥಳಾಂತರ

* ಎರಡು ವರ್ಷಗಳಲ್ಲಿ 19 ಕಾಲೇಜುಗಳ ವಿಲೀನ

* ಈ ತಿಂಗಳ ಅಂತ್ಯಕ್ಕೆ ಸ್ಪಷ್ಟ ಚಿತ್ರಣ

* ಕೆಲವು ಹುದ್ದೆಗಳ ಭರ್ತಿಗೆ ಕ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT