ಬೆಂಗಳೂರು: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಜಿ.ಎಂ. ಅಭಿನವಶ್ರೀ ಹಾಲವೀರಪ್ಪಜ್ಜ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
‘ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ನನ್ನಿಂದ ₹ 5 ಕೋಟಿ ಪಡೆದು ವಂಚಿಸಿದ್ದಾರೆ‘ ಎಂದು ಆರೋಪಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ₹ 1.50 ಕೋಟಿ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಸೆಪ್ಟೆಂಬರ್ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು. ಇತ್ತೀಚೆಗಷ್ಟೇ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.