ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಕೊನೆಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Last Updated 24 ಡಿಸೆಂಬರ್ 2022, 22:30 IST
ಅಕ್ಷರ ಗಾತ್ರ

ಹಾವೇರಿ: ಏಲಕ್ಕಿ ಕಂಪಿನ ನಾಡಿನಲ್ಲಿಜ.6ರಿಂದ 8ವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆಗೊಳಿಸಿದರು.

ಶಿಗ್ಗಾವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮುದಾಯ ಭವನದ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಬೇಕು. ಎಲ್ಲೆಡೆ ಕನ್ನಡದ ಕಂಪು ಹರಡಬೇಕು. ಇತರ ಸಮ್ಮೇಳನಗಳಿಗಿಂತ ಹಾವೇರಿ ಸಾಹಿತ್ಯ ಸಮ್ಮೇಳನ ಉತ್ಕೃಷ್ಟವಾಗಿರುತ್ತದೆ’ ಎಂದು ಹೇಳಿದರು.

‘ಕನ್ನಡ ಭಾಷೆ, ನೆಲ, ಜಲ ಹಾಗೂ ಜನರನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ಕನ್ನಡಿಗರ ಸಮಸ್ಯೆಗಳನ್ನು ಸಮ್ಮೇಳನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಇದು ಎಲ್ಲ ಕನ್ನಡಿಗರ ಕಾರ್ಯಕ್ರಮವಾಗಿದ್ದು ಎಲ್ಲರೂ ಆಗಮಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.

32 ಪುಟಗಳ ಆಮಂತ್ರಣ ಪತ್ರಿಕೆ:

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಕಟಗೊಂಡಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು 32 ಪುಟಗಳನ್ನು ಹೊಂದಿದೆ. ಮುಖಪುಟದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌.ಎಂ. ವಿಶ್ವೇಶ್ವರಯ್ಯ, ಸರ್‌ ಮಿರ್ಜಾ ಇಸ್ಮಾಯಿಲ್‌ ಭಾವಚಿತ್ರ ಪ್ರಕಟಿಸಲಾಗಿದೆ. ಜತೆಗೆ ಸಮ್ಮೇಳನದ ಲಾಂಛನ, ಭುವನೇಶ್ವರಿ ದೇವಿ, ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ ಹಾಗೂ ಪುರಸಿದ್ಧೇಶ್ವರ ದೇವಸ್ಥಾನದ ಚಿತ್ರವನ್ನು ಒಳಗೊಂಡಿದೆ.

ಬೆನ್ನುಡಿಯಲ್ಲಿ ಸಾಹಿತ್ಯ ಸಮ್ಮೇಳನಗಳ ಪರಂಪರೆ ಕುರಿತು ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರ ಸಂದೇಶವಿದೆ. ‘ಬನ್ನಿ ಹಾವೇರಿಗೆ ಬನ್ನಿ ನಮ್ಮೂರಿಗೆ...’ ಎಂಬ ಘೋಷವಾಕ್ಯ ಗಮನ ಸೆಳೆಯುತ್ತಿದೆ.

****

ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದೇನೆ

-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT