ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ನಿಂದನೆ ಆರೋಪ: ತುಷಾರ್‌ ಗಿರಿನಾಥ್‌ಗೆ ನೋಟಿಸ್‌

Published 14 ಮಾರ್ಚ್ 2024, 1:26 IST
Last Updated 14 ಮಾರ್ಚ್ 2024, 1:26 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಮಲ್ಲತ್ತಹಳ್ಳಿ ಕೆರೆ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆ ಕೈಗೊಳ್ಳದಂತೆ ಕೋರ್ಟ್‌ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ರಸ್ತೆ ನಿರ್ಮಿಸಲಾಗುತ್ತಿದೆ’ ಎಂದು ಆರೋಪಿಸಲಾದ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌, ‘ಕೆರೆ ಪ್ರದೇಶದಲ್ಲಿ ಅಕ್ರಮ ನಿರ್ಮಾಣ ಚಟುವಟಿಕೆ ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ; ರಸ್ತೆ ಸೇರಿದಂತೆ ಯಾವುದೇ ಶಾಶ್ವತ ಅಥವಾ ತಾತ್ಕಾಲಿಕ ನಿರ್ಮಾಣ ಕಾರ್ಯ ಕೈಗೊಳ್ಳಬಾರದು. ಗಣೇಶ ಮೂರ್ತಿಗಳ ವಿಸರ್ಜನೆ ಸೇರಿದಂತೆ ಯಾವುದೇ ರೀತಿಯ ಉತ್ಸವಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ 2023ರ ಮಾರ್ಚ್ 14ರಂದು ಆದೇಶಿಸಿತ್ತು. ಆದರೂ, ಈ ಆದೇಶವನ್ನು ಉಲ್ಲಂಘಿಸಿ ಅಲ್ಲಿ 80 ಅಡಿ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಕೋರ್ಟ್ ಆದೇಶವನ್ನು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.

‘ಮಲ್ಲತ್ತಹಳ್ಳಿ ಕೆರೆ ಒಟ್ಟು 71.18 ಎಕರೆ ಪ್ರದೇಶ ವ್ಯಾಪ್ತಿಯಲ್ಲಿದ್ದು, ಅದರಲ್ಲಿ ಮೂರು ಎಕರೆಗೆ ಸಂಬಂಧಿಸಿದಂತೆ ವ್ಯಾಜ್ಯ ನಡೆಯುತ್ತಿದೆ. 42 ಎಕರೆ ಪ್ರದೇಶದಲ್ಲಿ ಜಲಮೂಲ ಇದ್ದು, ಅದನ್ನು 44 ಎಕರೆಗೆ ವಿಸ್ತರಿಸಿ ಅಭಿವೃದ್ಧಿಪಡಿಸಬೇಕಾಗಿದೆ. ಸದ್ಯ ಆ ಕೆರೆಯಲ್ಲಿ ನೀರಿಲ್ಲ. ಕೆರೆಯ ಪ್ರದೇಶದಲ್ಲಿಯೇ ಕೊಳಚೆ ನೀರು ಹರಿಯುವ ಮಾರ್ಗವಿದೆ’ ಎಂದು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT