ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನ ಕಾಯ್ದೆ ಉಲ್ಲಂಘನೆ ಆರೋಪ: ಕಂಪನಿಯೂ ಪ್ರತಿವಾದಿಯಾಗಬೇಕು; ಹೈಕೋರ್ಟ್‌

Published 2 ಮೇ 2024, 16:19 IST
Last Updated 2 ಮೇ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ‘ಕನಿಷ್ಠ ವೇತನ ಕಾಯ್ದೆ–1948ರ ಉಲ್ಲಂಘನೆಯ ಅಪರಾಧ ಪ್ರಕರಣಗಳಲ್ಲಿ ಕಂಪನಿಯನ್ನೂ ಅಗತ್ಯ ಪ್ರತಿವಾದಿಯನ್ನಾಗಿ ಮಾಡಬೇಕು’ ಎಂದು ಆದೇಶಿಸಿರುವ ಹೈಕೋರ್ಟ್‌, ‘ಕ್ರಿಮಿನಲ್ ಪ್ರಕರಣಗಳಲ್ಲಿ ಕಂಪನಿಯನ್ನು ಪ್ರತಿವಾದಿಯನ್ನಾಗಿ ಮಾಡದೆ ಅದರ ನಿರ್ದೇಶಕರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

‘ನನ್ನ ವಿರುದ್ಧ ಶಿವಮೊಗ್ಗ ಜೆಎಂಎಫ್‌ಸಿ 2ನೇ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ನಗರದ ಪಿ.ಪಿ.ಸೈಯದ್‌ ಪಾಷ ಅಲಿಯಾಸ್ ಪಿ.ಎಸ್.ಅಯೂಬ್‌ ಮತ್ತು ಸಮೀರ್ ಸುಲ್ತಾನಾ ಅಲಿಯಾಸ್ ಶಮೀಮ್‌ ಸುಲ್ತಾನಾ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

‘ಅರ್ಜಿದಾರರು ಅಟಿಕಾ ಗೋಲ್ಡ್ ಕಂಪನಿಯಲ್ಲಿ ನಿರ್ದೇಶಕರಾಗಿ ತಮ್ಮ ಹೊಣೆಗಾರಿಕೆ ನಿರ್ವಹಿಸಿದ್ದಾರೆ. ಅವರು ಕಂಪನಿಯ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ಮೊದಲಿಗೆ ಕಂಪನಿಯನ್ನು ಪ್ರತಿವಾದಿಯನ್ನಾಗಿ ಮಾಡಬೇಕಾಗಿದೆ. ಕಂಪನಿಯನ್ನು ಪ್ರತಿವಾದಿಯನ್ನಾಗಿ ಮಾಡದೆ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಿದರೆ ಊರ್ಜಿತವಾಗುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರ ಪರ ಮೊಹಮದ್ ತಾಹಿರ್ ವಾದ ಮಂಡಿಸಿದ್ದರು.

ಪ್ರಕರಣವೇನು?: ‘ಅಟಿಕಾ ಗೋಲ್ಡ್ ಕಂಪನಿಯಲ್ಲಿ ಕಾರ್ಮಿಕರಿಗೆ ಸರಿಯಾದ ವೇತನ ನೀಡುತ್ತಿಲ್ಲ’‌ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಿವಮೊಗ್ಗದ ಕಾರ್ಮಿಕ ಅಧಿಕಾರಿ ಸ್ಥಳೀಯ ನ್ಯಾಯಾಲಯದಲ್ಲಿ ಅದರ ನಿರ್ದೇಶಕರ ವಿರುದ್ಧ; ಕನಿಷ್ಠ ವೇತನ ಕಾಯ್ದೆ–1948ರ ಕಲಂ 25ರ ನಿಯಮ 7,9 ಹಾಗೂ 21ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಪರಿಗಣಿಸಿದ್ದ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT