ನವದೆಹಲಿ: ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಸಲ್ಲಿಸಿರುವ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಕಾರ್ಖಾನೆ ಮಾಲೀಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತು.
ಎಥೆನಾಲ್ ಉತ್ಪಾದನೆ ವಿಚಾರದಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ನೋಟಿಸ್ ಪ್ರಶ್ನಿಸಿ ಯತ್ನಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಕಾರ್ಖಾನೆ ತೆರೆಯಲು ಅನುಮತಿ ನೀಡಿತ್ತು.
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯವನ್ನು ಪ್ರತಿವಾದಿಯನ್ನಾಗಿ ಸೇರ್ಪಡೆಗೊಳಿಸಲು ಸೂಚಿಸಿತು. ಬಳಿಕ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.