ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಾಸಿಕ್ಯೂಷನ್‌ ಪ್ರಭಾರ ನಿರ್ದೇಶಕ ನೇಮಕ ವಜಾಗೊಳಿಸಿದ ಹೈಕೋರ್ಟ್‌

Published 12 ಮಾರ್ಚ್ 2024, 15:52 IST
Last Updated 12 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಸಿಕ್ಯೂಷನ್ ನಿರ್ದೇಶನಾಲಯದ ಪ್ರಭಾರ ನಿರ್ದೇಶಕ ಎಚ್.ಕೆ.ಜಗದೀಶ್ ನೇಮಕಾತಿಯನ್ನು ರದ್ದುಪಡಿಸಿರುವ ಹೈಕೋರ್ಟ್‌, ‘ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಬೇಕು ಮತ್ತು ವಿಳಂಬ ಮಾಡದೆ ನಿಯಮಾನುಸಾರ ಅರ್ಹರನ್ನು ನೇಮಕ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ವಕೀಲೆ ಸುಧಾ ಕಾಟ್ವ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಪುರಸ್ಕರಿಸಿದೆ.

‘ಈ ಹುದ್ದೆಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸಮ್ಮತಿ ಅಗತ್ಯ. ಆದರೆ, ಈ ಪ್ರಕರಣದಲ್ಲಿ ಅವರ ಸಮ್ಮತಿ ಪಡೆದಿಲ್ಲ. ಅರ್ಹತೆ ಇಲ್ಲದ ವ್ಯಕ್ತಿಯನ್ನು ಪ್ರಭಾರ ಹುದ್ದೆಗೆ ನೇಮಕ ಮಾಡುವಂತಿಲ್ಲ. ಅಂತೆಯೇ, ಪ್ರಭಾರ ನಿರ್ದೇಶಕ ಒಂದು ವರ್ಷದ ನಂತರ ಮುಂದುವರಿಯುವಂತಿಲ್ಲ. ಆದರೆ, ಹಾಲಿ ನೇಮಕಾತಿಯು 2019ರಿಂದಲೂ ಮುಂದುವರಿಯುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ಪ್ರಭಾರ ನಿರ್ದೇಶಕರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

‘ಜಗದೀಶ್ ಅವರನ್ನು, ಅಪರಾಧ ಪ್ರಕ್ರಿಯಾ ಸಂಹಿತೆ-1973 (ಸಿಆರ್‌ಪಿಸಿ) ಮತ್ತು ಕರ್ನಾಟಕ ನಾಗರಿಕ ಸೇವೆಗಳ ಅಧಿನಿಯಮ–1966ಕ್ಕೆ (ಕೆಸಿಎಸ್‌ಆರ್‌) ವಿರುದ್ಧವಾಗಿ 2019ರ ಆಗಸ್ಟ್ 5ರಂದು ಪ್ರಾಸಿಕ್ಯೂಷನ್ ವಿಭಾಗದ ಪ್ರಭಾರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಅರ್ಜಿದಾರರ ಪರ ಎಸ್‌.ಉಮಾಪತಿ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT