ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರ್ಕಾವತಿ ರೀಡೂ ವರದಿ ಕೊಡಿ: ಸರ್ಕಾರಕ್ಕೆ ರಾಜ್ಯಪಾಲರ ಪತ್ರ

Published : 21 ಸೆಪ್ಟೆಂಬರ್ 2024, 19:18 IST
Last Updated : 21 ಸೆಪ್ಟೆಂಬರ್ 2024, 19:18 IST
ಫಾಲೋ ಮಾಡಿ
Comments

ಬೆಂಗಳೂರು: ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್‌.ಎಸ್‌. ಕೆಂಪಣ್ಣ ಆಯೋಗದ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರ ಮತ್ತು ರಾಜಭವನದ ಮಧ್ಯೆ ಬಿಗಡಾಯಿಸುತ್ತಲೇ ಇರುವ ಸಂಘರ್ಷದ ಬೆನ್ನಿಗೇ, 2013–18ರ ಅವಧಿಯ ವಿವರಣೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಆಯೋಗದ ವರದಿಗೆ ಸಂಬಂಧಿಸಿದ ಕಡತವನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ನಗರಾಭಿವೃದ್ಧಿ ಇಲಾಖೆ ಇದೇ 11ರಂದು ಸಲ್ಲಿಸಿದೆ.

ಏನಿದು ಡಿನೋಟಿಫೈ ಪ್ರಕರಣ: ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 540 ಎಕರೆಯನ್ನು ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ‘ರೀಡೂ’ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು, ಅಂದು ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ ಶೆಟ್ಟರ್ ಅವರು ವಿಧಾನಸಭೆ ಅಧಿವೇಶನದಲ್ಲಿಯೇ ಆರೋಪ ಮಾಡಿದ್ದರು. 

ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಜಟಾಪಟಿಗೆ ಕಾರಣವಾಗಿದ್ದ ಈ ಪ್ರಕರಣದ ವಿಚಾರಣೆಗೆ 2014ರ ಆಗಸ್ಟ್‌ನಲ್ಲಿ ನ್ಯಾ. ಕೆಂಪಣ್ಣ ನೇತೃತ್ವದಲ್ಲಿ ಆಯೋಗವನ್ನು ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೇಮಿಸಿತ್ತು. ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 2004ರಿಂದ 2014ರವರೆಗೆ 983 ಎಕರೆ ವಿಸ್ತೀರ್ಣವನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಹೊರಗಿಟ್ಟಿರುವ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಸೂಚಿಸಿತ್ತು. 

2017ರ ಆಗಸ್ಟ್‌ನಲ್ಲಿ ಆಯೋಗವು 1,861 ಪುಟಗಳ ವರದಿಯನ್ನು ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಕುಂಠಿಯಾ ಅವರಿಗೆ ಸಲ್ಲಿಸಿತ್ತು. ಈ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂದಿನ ಸರ್ಕಾರ ಮಂಡಿಸಿತ್ತು. ಅದನ್ನು ಒಪ್ಪಿದೆಯೋ ಅಥವಾ ತಿರಸ್ಕರಿಸಿದೆಯೋ ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ನಿಯಮಾನುಸಾರ, ವಿಧಾನ ಮಂಡಲದ ಉಭಯ ಸದನಗಳಲ್ಲಿಯೂ ಮಂಡಿಸಿರಲಿಲ್ಲ. ಆ ಬಳಿಕ, ಅಧಿಕಾರಕ್ಕೆ ಬಂದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಗಳು ಇದರ ಬಗ್ಗೆ ಮೌನ ವಹಿಸಿದ್ದವು. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ, ಕಾಂಗ್ರೆಸ್ ಪಕ್ಷವು ಶೇ 40ರಷ್ಟು ಕಮಿಷನ್ ಆರೋಪ ಮಾಡಿತ್ತು. ಅದಕ್ಕೆ ತಿರುಗೇಟು ನೀಡಿದ್ದ ಬೊಮ್ಮಾಯಿ, ಅರ್ಕಾವತಿ ಹಗರಣವನ್ನು ಹೊರತಂದು ಶಿಕ್ಷೆಗೆ ಗುರಿಪಡಿಸುತ್ತೇವೆ ಎಂದು ಎಚ್ಚರಿಸಿದ್ದರು. ಆದರೆ, ಯಾವುದೇ ಕ್ರಮವೂ ಆಗಿರಲಿಲ್ಲ.

‘ಕೆಂಪಣ್ಣ ಆಯೋಗವು ತಮ್ಮನ್ನು ದೋಷಮುಕ್ತಗೊಳಿಸಿ ವರದಿ ನೀಡಿದೆ’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್‌ ಅರ್ಜಿ ಮೇಲಿನ ತೀರ್ಪು ಅನ್ನು ಹೈಕೋರ್ಟ್‌ ನೀಡಲು ಬಾಕಿ ಇರುವ ಮಧ್ಯೆಯೇ, ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಕೆಂಪಣ್ಣ ವಿಚಾರಣಾ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.

ರಾಜ್ಯಪಾಲರಿಗೆ ಆಗಸ್ಟ್‌ 24ರಂದು ಪತ್ರ ಬರೆದಿದ್ದ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ, ಕೆಂಪಣ್ಣ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು. ‘ಕೆಂಪಣ್ಣ ಆಯೋಗವು 2017ರ ಆಗಸ್ಟ್‌ನಲ್ಲಿ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಜಮೀನುಗಳ ಡಿನೋಟಿಫಿಕೇಷನ್‌ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಾಗ, ಸಿದ್ದರಾಮಯ್ಯ ಅವರೇ ಈ ಆಯೋಗವನ್ನು ರಚಿಸಿದ್ದರು’ ಎಂದೂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT