ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ
Published 31 ಅಕ್ಟೋಬರ್ 2023, 14:40 IST
Last Updated 31 ಅಕ್ಟೋಬರ್ 2023, 14:40 IST
ಅಕ್ಷರ ಗಾತ್ರ

ನವದೆಹಲಿ: ಆನೇಕಲ್‌ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದಿಂದ ಸಮಗ್ರ ಮಾಹಿತಿ ಕೇಳಿದೆ. 

ನ್ಯಾಯಮೂರ್ತಿ ಪ್ರಕಾಶ್‌ ಶ್ರೀವಾಸ್ತವ ನೇತೃತ್ವದ ಪೀಠವು ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿದ್ದು, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಬಾಲಾಜಿ ಗೋದಾಮಿನ ಮಾಲೀಕರನ್ನು ಪ್ರತಿವಾದಿಗಳನ್ನಾಗಿ ಸೇರ್ಪಡೆ ಮಾಡಿಕೊಂಡಿದೆ. 

ಬಾಲಾಜಿ ಗೋದಾಮಿನ ಮಾಲೀಕರ ಹೆಸರು, ವಿಳಾಸ ಹಾಗೂ ಇನ್ನಿತರ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿದೆ. ಮೃತಪಟ್ಟ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ಮಾಹಿತಿ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ. 

ಗೋದಾಮಿನಲ್ಲಿ ಪಟಾಕಿಗಳನ್ನು ಸಂಗ್ರಹಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಮಂಡಳಿಯ ಪರ ವಕೀಲರು ಪೀಠಕ್ಕೆ ತಿಳಿಸಿದರು. 

ಅವಘಡಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಗೋದಾಮು ಕಾರ್ಯನಿರ್ವಹಿಸುತ್ತಿತ್ತು. ಈ ಸಂಬಂಧ ಸಮಗ್ರ ಮಾಹಿತಿ ನೀಡಲು ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದರು. 

ಪ್ರಕರಣವನ್ನು ದಕ್ಷಿಣ ವಲಯದ ಪೀಠಕ್ಕೆ ವರ್ಗಾಯಿಸಲಾಗಿದೆ. ಮುಂದಿನ ವಿಚಾರಣೆ ನವೆಂಬರ್‌ 30ರಂದು ನಡೆಯಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT