ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ತೊಡಕು ನಿವಾರಣೆಗೆ ನ್ಯಾ. ಭಕ್ತವತ್ಸಲ ನೇತೃತ್ವದ ಆಯೋಗ

Last Updated 8 ಮೇ 2022, 19:26 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ನೀಡಿರುವ ಮೀಸಲಾತಿಯನ್ನು ಖಾತರಿಪಡಿಸಲು ಆಯಾ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಲಾಗಿದೆ.

ನಿವೃತ್ತ ಐಎಎಸ್‌ ಅಧಿಕಾರಿ ಸಿ.ಆರ್‌. ಚಿಕ್ಕಮಠ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸಲು ಉಂಟಾಗಿರುವ ತೊಡಕು ನಿವಾರಣೆಗೆ ಮಾರ್ಚ್‌ 31 ರಂದು ನಡೆದ ಸರ್ವಪಕ್ಷ ಸಭೆಯ ನಿರ್ಧಾರದಂತೆ ಆಯೋಗ ರಚಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸುವುದು ಮತ್ತು ಈ ಸಮುದಾಯಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸಿ, ಶಿಫಾರಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ನೀಡಲಾಗಿದೆ. ಆಯೋಗವು ತನ್ನ ಕೆಲಸವನ್ನು ಪೂರ್ಣಗೊಳಿಸಲು ಯಾವುದೇ ಕಾಲಮಿತಿ ವಿಧಿಸಿಲ್ಲ.

‘ನಿಖರವಾದ ಅಂಕಿಅಂಶಗಳ ಆಧಾರದಲ್ಲಿ ಮೂರು ಹಂತದ ಪರಿಶೀಲನೆ ನಡೆಸಿ, ಆಯಾ ಸಮುದಾಯಗಳ ರಾಜಕೀಯ ಹಿಂದುಳಿ
ದಿರುವಿಕೆಯನ್ನು ಖಾತರಿಪಡಿಸಿದ ಬಳಿಕವೇ ರಾಜಕೀಯ ಮೀಸಲಾತಿ ನೀಡಬೇಕು’ ಎಂದು ಸುಪ್ರೀಂಕೋರ್ಟ್‌ 2010ರಲ್ಲಿ ತೀರ್ಪು ನೀಡಿತ್ತು. 2021ರ ಮಾರ್ಚ್‌ನಲ್ಲೂ ಸುಪ್ರೀಂಕೋರ್ಟ್‌ ಇದನ್ನು ಪುನರುಚ್ಚರಿಸಿತ್ತು. 2022 ರ ಜನವರಿಯಲ್ಲಿ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೂರು ಹಂತದ ಪರಿಶೀಲನೆ ಇಲ್ಲದೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಅವಕಾಶ ನಿರಾಕರಿಸಿತ್ತು. ಈ ಆದೇಶ ಇಡೀ ದೇಶಕ್ಕೆ ಅನ್ವಯವಾಗುತ್ತದೆ ಎಂದು ಸುಪ್ರೀಂಕೋರ್ಟ್‌ ಹೇಳಿತ್ತು.

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬಾಕಿ ಇವೆ. ಮೂರು ಹಂತದ ಪರಿಶೀಲನೆ ನಡೆಸದಿದ್ದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಈ ಕಾರಣದಿಂದ ಮೂರು ಹಂತದ ಪರಿಶೀಲನೆಯ ಭಾಗವಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗ ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT