ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಗ್ರಾಮಗಳಿಗೆ ಮಹಾರಾಷ್ಟ್ರದಿಂದ ವಿಮೆ: ಉದ್ಧಟತನದ ಪರಮಾವಧಿ ಎಂದ ಸಿಎಂ ಬೊಮ್ಮಾಯಿ

Last Updated 5 ಏಪ್ರಿಲ್ 2023, 6:51 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ.

ಆರೋಗ್ಯ ವಿಮೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ’ ಎಂದು ಕಿಡಿಕಾರಿದ್ದಾರೆ.

‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು’ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

‘ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌರವ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು’ ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT