ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಂಟಮುರಿ ಪ್ರಕರಣ: ಅರ್ಜಿ ವಿಲೇವಾರಿ

Published 15 ಏಪ್ರಿಲ್ 2024, 16:15 IST
Last Updated 15 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 12 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಹಾಜರಾಗಿ, ‘ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ವಿಚಾರಣಾ ನ್ಯಾಯಲಯಕ್ಕೆ ಕಾಲಮಿತಿ ನಿಗದಿಪಡಿಸಬೇಕು. ಇದು ಅತಿ ಅಪರೂಪದ ಪ್ರಕರಣವಾಗಿದ್ದು, ಈ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆಯ ಸಂದೇಶ ರವಾನಿಸಬೇಕಿದೆ. ಸಂತ್ರಸ್ತೆಯ ಆರೋಗ್ಯ ಸ್ಥಿತಿಗತಿ ಮೇಲೆ ನಿಗಾ ವಹಿಸಲಾಗುವುದು. ಆಕೆಯ ಮಾನಸಿಕ ಆರೋಗ್ಯ ಪರಿಗಣಿಸಿ ಒಂದು ವರ್ಷದ ಅವಧಿಯವರೆಗೆ ಎರಡು ತಿಂಗಳಿಗೊಮ್ಮೆ ತಜ್ಞರ ಸಮಾಲೋಚನೆಗೆ ಒಳಪಡಿಸಲು ಅವಕಾಶ ನೀಡಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಕರಣದ ವರದಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸಲ್ಲಿಸುವಂತೆ ಸೂಚಿಸಿತು. ಅರ್ಜಿಗೆ ಸಂಬಂಧಿಸಿದಂತೆ ಆದೇಶ ಪ್ರಕಟಿಸಲಾಗುವುದು’ ಎಂದು ತಿಳಿಸಿ ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT