ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಬಂದ್‌: ಸೂಕ್ತ ಕ್ರಮ– ಹೈಕೋರ್ಟ್‌ಗೆ ಎಜಿ ಸ್ಪಷ್ಟನೆ

Published 25 ಸೆಪ್ಟೆಂಬರ್ 2023, 16:31 IST
Last Updated 25 ಸೆಪ್ಟೆಂಬರ್ 2023, 16:31 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಯಾವುದೇ ಶಾಂತಿಯುತ ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಕೇವಲ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರವೇ ಅವಕಾಶವಿದೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು‘ ಎಂದು ಅಡ್ವೊಕೇಟ್‌ ಜನರಲ್‌ ಹೈಕೋರ್ಟ್‌ಗೆ ಭರವಸೆ ನೀಡಿದರು.

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಮಂಗಳವಾರ (ಸೆ.26) ಕರೆ ನೀಡಿರುವ ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು‘ ಎಂದು ಕೋರಿ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್‌ ಹಾಗೂ ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ‘ಮಂಗಳವಾರ (ಸೆ.26) ಕರೆ ನೀಡಲಾಗಿರುವ ಬಂದ್‌ಗೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದೆ‘ ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲರಾದ ಜಿ.ಆರ್.ಮೋಹನ್‌ ಮತ್ತು ಸುನಿಲ್‌ ಎಸ್.ರಾವ್‌, ’ಬಂದ್‌ ವೇಳೆ ಆಸ್ಪತ್ರೆ, ಸಾರಿಗೆ ಮತ್ತು ಬಿಎಂಟಿಸಿ ಬಸ್‌ ಸಂಚಾರಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ’ಬಂದ್‌ ಸಂದರ್ಭದಲ್ಲಿ ಸಾರ್ವಜನಿಕ ಜನಜೀವನ ಅಸ್ತವ್ಯಸ್ತವಾಗದಂತೆ, ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಎಲ್ಲಾ ಸುರಕ್ಷತಾ ಕ್ರಮ  ಕೈಗೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ. ಇಂತಹುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ 2020ರ ಫೆಬ್ರುವರಿ 20ರಂದು ಸರ್ಕಾರಕ್ಕೆ ಆದೇಶಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ. ಹೀಗಾಗಿ, ಈ ಬಗ್ಗೆ ಪ್ರತ್ಯೇಕವಾಗಿ ಯಾವುದೇ ನಿರ್ದೇಶನ ನೀಡುವ ಅನಿವಾರ್ಯತೆ ಇಲ್ಲ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಿಲೇವಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT